Mysore
23
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

H D Kumaraswamy

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಸಿದ್ದರಾಮಯ್ಯನವರು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಒಂದು ಮಾತು ಸ್ಪಷ್ಟ; ಕರ್ನಾಟಕದ ಆರ್ಥಿಕತೆ ಹಿಂಜರಿಕೆಯತ್ತ ಸಾಗಿದೆ. ಸಿಎಜಿ ವರದಿ, ರಿಸರ್ವ್ ಬ್ಯಾಂಕ್ ಕೊಟ್ಟಿರುವ ಎಚ್ಚರಿಕೆಗಿಂತ ದೊಡ್ಡ ಆರ್ಥಿಕ ಅಪಾಯಕ್ಕೆ ಸಿಲುಕಿದೆ ಕರ್ನಾಟಕ. ಮುಂದಿನ ದಿನಗಳು ಇನ್ನೂ ದುರ್ಬರವಾಗಿವೆ. ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ.

ಈ ಆಯವ್ಯಯ ಕರ್ಣಕಠೋರ ಮತ್ತು ರಾಜ್ಯಕ್ಕೆ ಭಾರ. ಏಕೆಂದರೆ, ಮುಖ್ಯಮಂತ್ರಿಗಳು ಕೇಂದ್ರದ ನಿಂದನೆಯನ್ನು ಈ ಬಾರಿಯೂ ಮುಂದುವರಿಸಿದರು, ಅದು ಅಗತ್ಯವಿರಲಿಲ್ಲ. ಒಕ್ಕೂಟ ವ್ಯವಸ್ಥೆಯ ಮೂಲತತ್ವವನ್ನೇ ಮರೆತು ತಮ್ಮ ಸರಕಾರದ ಕೆಟ್ಟ ಮಾದರಿಯನ್ನು ಪ್ರಚಾರ ಮಾಡಿಕೊಂಡು ಆತ್ಮರತಿ ಮೆರೆದಿದ್ದಾರೆ. 16ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲನ್ನು 3.61%ರಿಂದ 4.7%ಗೆ ಏರಿಸಲಾಗಿದೆ. ಇದರಿಂದ ಅನಾಮತ್ತಾಗಿ ₹11,000 ಕೋಟಿಗೂ ಹೆಚ್ಚು ಹಣ ರಾಜ್ಯಕ್ಕೆ ಹರಿದುಬರುತ್ತದೆ. ಕೇಂದ್ರದಿಂದ ಹಣ ಬರುವುದು ಕಡಿಮೆ ಆಗಿಲ್ಲ ಎಂಬುದನ್ನು ಅವರ ಬಜೆಟ್ ಪುಸ್ತಕವೇ ಹೇಳುತ್ತದೆ!

ಆದಾಯದ ಕೊರತೆ, ಸತತವಾಗಿ ಹೆಚ್ಚುತ್ತಿರುವ ಸಾಲದ ಪ್ರಮಾಣ ಕಳವಳಕಾರಿ. ಅನುದಾನ ಹಂಚಿಕೆಯಲ್ಲಿ ತಾಳಮೇಳವಿಲ್ಲ. ಲೆಕ್ಕಾಚಾರ ಹಳಿತಪ್ಪಿದೆ ಎಂಬುದಕ್ಕೆ ಬಜೆಟ್ ಪುಸ್ತಕವೇ ಸ್ಪಷ್ಟ ಸಾಕ್ಷಿ. ನಿರೀಕ್ಷೆಗಳನ್ನು ಸೃಷ್ಟಿಸಿ, ಅತೀವ ನಿರಾಸೆ ಉಂಟು ಮಾಡಿದ್ದಾರೆ ಮುಖ್ಯಮಂತ್ರಿಗಳು.

ರಾಜ್ಯದ್ದು ಈಗ ₹4.48 ಲಕ್ಷ ಕೋಟಿ ಗಾತ್ರದ ಬಜೆಟ್. ರಾಜ್ಯದ ಈಗಿನ ಒಟ್ಟು ಸಾಲ ₹8.24 ಲಕ್ಷ ಕೋಟಿ! ಈ ಸಾಲ ₹1.16 ಲಕ್ಷ ಕೋಟಿಯಿಂದ ₹1.32 ಲಕ್ಷ ಕೋಟಿಗೆ ಏರಿದೆ!! ಮುಂದಿನ ವರ್ಷಕ್ಕೆ ₹9 ಲಕ್ಷ ಕೋಟಿ ಮೀರುವುದು ಗ್ಯಾರಂಟಿ. ಈ ಸಾಲದ ಗ್ಯಾರಂಟಿ ಭೀತಿ ಹುಟ್ಟಿಸುತ್ತದೆ.

ಸಾಲ ಮಾಡುತ್ತಿದ್ದೀರಿ, ಸರಿ. ಅದನ್ನು ಏನಕ್ಕೆ ಬಳಕೆ ಮಾಡುತ್ತಿದ್ದೀರಿ? ಸಾಲಕ್ಕೆ ತಕ್ಕಂತೆ ಬಂಡವಾಳ ವೆಚ್ಚವೂ ಆಗಬೇಕಲ್ಲವೇ? ದುರಂತವೆಂದರೆ, ಬಂಡವಾಳ ವೆಚ್ಚ ಎಲ್ಲಿದೆಯೋ ಕಳೆದ ಮೂರು ವರ್ಷಗಳಿಂದ ಅಲ್ಲೇ ಇದೆ. ಇವರು ಸಾಲ ಮಾಡಿ ಮೋಜು ಮಾಡುತ್ತಿದ್ದಾರೆ. ಸಾಲದ ಮೇಲೆ ಸಾಲ ಮಾಡಿ 140ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರಿಗೆ ಕ್ಯಾಬಿನೆಟ್ ದರ್ಜೆ, ಸ್ಟೇಟ್ ಮಿನಿಸ್ಟರ್ ದರ್ಜೆ ದಯಪಾಲಿಸಿ ಪೊಗದಸ್ತಾಗಿ ಸಾಕುತ್ತಿದ್ದಾರೆ. ಅನುತ್ಪಾದಕ ವೆಚ್ಚಕ್ಕೆ ಹಣ ಪೋಲಾಗುತ್ತಿದ್ದು, ಈ ಸರಕಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರವಾಗಿದೆ. ಸಾಲದ ದುಡ್ಡು ಅವರ ಕಿಸೆಗೆ ಹೋಗಿ ಸೇರುತ್ತಿದೆ. ವೋಟು ಕೊಟ್ಟ ಮಹಾಪಾಪಕ್ಕೆ ಜನತೆಯನ್ನು ಶಾಶ್ವತವಾಗಿ ಸಾಲದ ಕೂಪಕ್ಕೆ ನೂಕುವ ಧಾರುಣ ಬಜೆಟ್ ಇದಾಗಿದೆ ಎಂದು ಕಿಡಿಕಾರಿದ್ದಾರೆ.

Tags:
error: Content is protected !!