ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರ ಬಿಡಿಎ ಆಸ್ತಿಗಳ ಮಾರಾಟಕ್ಕೆ ಮುಂದಾಗಿದೆ. ಬಿಬಿಎಂಪಿ ಹಾಗೂ ಜಲಮಂಡಳಿಯ ಆಸ್ತಿಗಳನ್ನು ಕೂಡ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.
ಕಾಂಗ್ರೆಸ್ ರಾಜ್ಯದ ಆರ್ಥಿಕ ಶಿಸ್ತನ್ನು ಸರ್ವನಾಶ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಒಂದು ವರ್ಷದಲ್ಲಿ ವಿಧಾನಸೌಧವನ್ನೂ ಅಡಮಾನ ಇಡುತ್ತಾರೆ ದೂರಿದರು.
ಸರ್ಕಾರಿ ನೌಕರರು ಮತ ನೀಡಿಲ್ಲವೆಂಬ ಕಾರಣಕ್ಕೆ ವೇತನ ಹೆಚ್ಚಿಸಿಲ್ಲ. 7 ನೇ ವೇತನ ಆಯೋಗದ ವರದಿ ಜಾರಿ ‘ನಾಳೆ ಬಾ’ ಎಂಬ ಸ್ಥಿತಿಗೆ ಬಂದಿದೆ. 143 ಶಾಸಕರ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದೆ. ಅದಕ್ಕಾಗಿ ತೈಲ ದರ ಏರಿಸಿದ್ದಾರೆ. ಇದರಿಂದ ಕಾಂಗ್ರೆಸ್ ಶಾಸಕರು ಕೂಡ ಬೇಸರಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ಪಾಠ ಕಲಿಸಲಿದ್ದಾರೆ ಎಂದರು.