ಹಾಸನ: ಮುಂಬರುವ ಲೋಕಸಭಾ ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಲಿದ್ದು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂಬ ವದಂತಿಗಳಿಗೆ, ಇವೆಲ್ಲಾ ಉಹಾಪೋಗಳು, ಆ ರೀತಿ ಏನು ಇಲ್ಲ. ಸಿಎಂ ಸಿದ್ದರಾಮಯ್ಯ ಅವರು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲೆಯೆ ಹೊಳೆ ನರಸೀಪುರ ತಾಲೂಕಿನ ಹಳ್ಳಿಮೈಸೂರಿನಲ್ಲಿ ಅವರು ಮಾತನಾಡಿ, ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರುತ್ತಾರೆ ಎನ್ನುವುದು ನನ್ನ ನಂಬಿಕೆ ಎಂದು ಯತೀಂದ್ರ ತಿಳಿಸಿದರು.
ಇನ್ನು ಡಿಕೆ ಶಿವಕುಮಾರ್ ಅವರು ಸಿಎಂ ಆಗತ್ತಾರೆ ಎಂಬ ಪ್ರಶ್ನೆಗೆ, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಹಲವಾರು ಜನ ಸಿಎಂ ಆಕಾಂಕ್ಷಿಗಳಿದ್ದರು, ನಮ್ಮ ಸರ್ಕಾರ ಮಾತ್ರವಲ್ಲ ಎಲ್ಲ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಈ ರೀತಿ ನಡೆಯುತ್ತದೆ. ಆದರೆ ರಾಜ್ಯಕ್ಕೆ ಒಂದು ಸ್ಥಿರ ಸರ್ಕಾರ ಕೊಡಬೇಕಿರುವುದು ಪಕ್ಷದ ಕರ್ತವ್ಯ ಆಗಿರುತ್ತದೆ. ಆ ನಿಟ್ಟಿನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಅವಧಿ ಪೂರೈಸುತ್ತಾರೆ ಎಂಬುದು ನನ್ನ ನಂಬಿಕೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.