ಶಿವಮೊಗ್ಗ: ಬಜೆಟ್ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ವಿರೋಧಿ ಬಣದಿಂದ ಆಕ್ಷೇಪವಿರುವ ಕಾರಣ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಫ್ಯಾಮಿಲಿಯೊಂದಿಗೆ ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಬೆಳಗಾವಿಯಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದರು.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸಿಎಂ ಸ್ಥಾನವನ್ನು ಬಿಟ್ಟುಕೊಡಲು ಸಿದ್ದರಿರದ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅನುಪಸ್ಥಿತಿಯಲ್ಲಿ ಸಭೆ ನಡೆಸಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳವಿದೆ ಎಂಬುದು ನೇರವಾಗಿ ಕಾಣಿಸುತ್ತಿದೆ ಎಂದರು.
ಇನ್ನು ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗೈರಾಗಿದ್ದರು.
ಈ ಬಗ್ಗೆ ಸ್ಪಷ್ಟನೆ ನೀಡಿದ ವಿಜಯೇಂದ್ರ ಅವರು, ನಾನು ಶಿಕಾರಿಪುರದಲ್ಲಿ ಇರುವುದರಿಂದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಲಿಲ್ಲ. ಸಚಿನ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವುದರಿಂದ ಯಾರಿಗೂ ನ್ಯಾಯ ಸಿಗಲ್ಲ. ಆದ್ದರಿಂದ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ಎಲ್ಲಾ ಸತ್ಯಾ ಸತ್ಯತೆ ಹೊರ ಬರಲಿದೆ ಎಂದು ಆಗ್ರಹಿಸಿದರು.