ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಈಗಾಗಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಪ್ರಕ್ರಿಯೆಯನ್ನು ಆರಂಭಿಸಿದೆ. ಕರ್ನಾಟಕದಲ್ಲೂ ಇದು ತುರ್ತಾಗಿ ನಡೆಯುವ ಅಗತ್ಯವಿದೆ ಎಂದು ಹೇಳಿದರು.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಸ್ಐಆರ್ ಬಂದರೆ ನಿಜವಾದ ಮತದಾರರು ಯಾರು, ಅವರು ಎಲ್ಲಿಂದ ಬಂದವರು, ಅವರ ಹಿನ್ನೆಲೆ ಏನು ಎಂಬುದು ಸೇರಿದಂತೆ ಎಲ್ಲಾ ವಿವರಗಳೂ ಲಭ್ಯವಾಗುತ್ತವೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಆದಷ್ಟು ಶೀಘ್ರ ಪತ್ರ ಬರೆದು ಮನವಿ ಮಾಡುವುದಾಗಿ ತಿಳಿಸಿದರು.
ರಾಜಧಾನಿ ಬೆಂಗಳೂರಿಗೆ ಹೊರ ರಾಜ್ಯಗಳು ಹಾಗೂ ಬೇರೆ ದೇಶಗಳಿಂದ ಬಂದು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ಪಡೆದುಕೊಂಡಿರುವವರನ್ನು ತಕ್ಷಣವೇ ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿ ಎಂದು ನಗರ ಪೊಲೀಸ್ ಆಯುಕ್ತರಿಗೆ ಒತ್ತಾಯಿಸಿದ್ದಾರೆ.
ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬಂದು ನಗರದ ಅನೇಕ ಕಡೆ ನೆಲೆಸಿದ್ದಾರೆ. ಕೆಲವು ಕಡೆ ರೋಹಿಂಗ್ಯಾಗಳು ಕೂಡ ಇದ್ದಾರೆ. ಅವರನ್ನು ಪತ್ತೆ ಮಾಡಿ ಇವರ ಬಳಿ ಇರುವ ಗುರುತಿನ ಚೀಟಿಗಳನ್ನು ವಿಚಾರಣೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.
ಹೊರದೇಶಗಳು ಮತ್ತು ಬೇರೆ ರಾಜ್ಯಗಳಿಂದ ಬಂದವರಿಗೆ ಕೆಲವರು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿ ಕೊಟ್ಟಿದ್ದಾರೆ. ಇದು ದುರುಪಯೋಗವಾಗುವ ಸಾಧ್ಯತೆ ಇದೆ. ಹೀಗಾಗಿ ನಗರ ಪೊಲೀಸ್ ಆಯುಕ್ತರು ತಕ್ಷಣವೇ ಪರಿಶೀಲಿಸಿ ವಶಕ್ಕೆ ಪಡೆಯಬೇಕೆಂದು ಮನವಿ ಮಾಡಿದರು.





