ಹುಬ್ಬಳ್ಳಿ: ಸೈಟ್ ವಾಪಸ್ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅಕ್ರಮ ಆಗಿರುವುದನ್ನು ಮತ್ತೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ಸೈಟ್ ವಾಪಸ್ ನೀಡುವುದಾಗಿ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಈಗ ಸೈಟ್ ವಾಪಸ್ ನೀಡಿರುವುದರಿದ ಹಲವಾರು ಪ್ರಶ್ನೆಗಳು ಉದ್ಬವಿಸಿವೆ. ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು ಎಂದರು.
ಎಫ್‌ಐಆರ್ ಆದ ಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಮತ್ತೊಂದು ಕಡೆ ಇ.ಡಿ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ಮಾಡುತ್ತಿದೆ. ಸೈಟ್ ವಾಪಸ್ ಮಾಡುವುದರ ಮೂಲಕ ಸಿಎಂ ಸಿದ್ದರಾಮಯ್ಯ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಆರೋಪಿಸಿದರು.