ರಾಜ್ಯ

KIOCL, HMT ಬಗ್ಗೆ ರಾಜ್ಯ ಸರ್ಕಾರದಿಂದ ಅಪಪ್ರಚಾರ: ಎಚ್.ಡಿ.ಕುಮಾರಸ್ವಾಮಿ ಕಿಡಿ

ಬಹಿರಂಗ ಚರ್ಚೆಗೆ ರೆಡಿ; ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಸವಾಲು||•

ಸಭೆ ಕರೆಯುವಂತೆ ಸಿಎಂಗೆ ಪತ್ರ ಬರೆಯುತ್ತೇನೆ ಎಂದ ಕೇಂದ್ರ ಸಚಿವರು

ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ

ಆಂಧ್ರದಲ್ಲಿ ಸಹಕಾರ, ಕರ್ನಾಟಕದಲ್ಲಿ ಅಸಹಕಾರ!!!

ಬೆಂಗಳೂರು: ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ ಸಮೇತ ರಾಜ್ಯ ಸರಕಾರದ ಜತೆ ಚರ್ಚೆಗೆ ತಯಾರಿದ್ದೇನೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ತಪ್ಪಾಗಿದ್ದರೆ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ

ಕೆಐಒಸಿಎಲ್ ಬಗ್ಗೆ ರಾಜ್ಯ ಸರಕಾರ ರಾಜಕಾರಣ ಮಾಡಬಾರದು. ಸಮಸ್ಯೆ ಇದ್ದರೆ ಕೂತು ಸರಿಪಡಿಸಿಕೊಳ್ಳಬೇಕು. ರಾಜ್ಯದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳನ್ನು ಉಳಿಸುವ ಬಗ್ಗೆ ನಾನು ಕೆಲಸ ಮಾಡುತ್ತಿದ್ದೇನೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆಯುತ್ತೇನೆ. ಒಂದು ಸಭೆ ಮಾಡಲಿ. ಅಲ್ಲಿ ದಾಖಲೆಗಳ ಸಮೇತ ನಾನು ಮಾತನಾಡುತ್ತೇನೆ. ಒಂದು ವೇಳೆ ಕೆಐಒಸಿಎಲ್ ತಪ್ಪುಗಳಿದ್ದರೆ ಅದಕ್ಕೆ ಆ ಇಲಾಖೆಯ ಸಚಿವನಾಗಿ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಅದರ ಹೊರತಾಗಿ ರಾಜ್ಯದ ಹಿತಾಸಕ್ತಿಯ ಬಗ್ಗೆ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಅರಣ್ಯ ಸಚಿವರಿಂದ ಕ್ಷುಲ್ಲಕ ರಾಜಕಾರಣ

ಅರಣ್ಯ ಸಚಿವರು ಈ ಎರಡೂ ಸಂಸ್ಥೆಗಳ ಬಗ್ಗೆ ಸತ್ಯಕ್ಕೆ ದೂರವಾದ ವಿಷಯಗಳನ್ನು ದಿನನಿತ್ಯವೂ ಮಾಧ್ಯಮಗಳಿಗೆ ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಮೊದಲು ಸಚಿವರು ದಾಖಲೆಗಳನ್ನು ಓದಿ ಅರಿತುಕೊಳ್ಳಬೇಕು. ಆ ನಂತರ ಅವರು ಮಾತನಾಡಿದರೆ ಚೆನ್ನಾಗಿರುತ್ತದೆ. ಅದರ ಹೊರತಾಗಿ ರಾಜ್ಯ ಅಭಿವೃದ್ಧಿ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡಿದರೆ ಅವರನ್ನು ಸಚಿವರು ಎಂದು ಕರೆಯಲಾಗುತ್ತದೆಯೇ ಎಂದು ಅವರು ಕಿಡಿಕಾರಿದರು.

ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ

ರಾಜ್ಯ ಸರ್ಕಾರದ ಹಠಮಾರಿತನದಿಂದ ಕುದುರೆಮುಖ ಸಂಸ್ಥೆಯ ಸುಮಾರು 300-400 ಕಾರ್ಮಿಕರು ಬೀದಿಯಲ್ಲಿ ನಿಂತಿದ್ದಾರೆ. ಒಂದು ಕಡೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವ ರಾಜ್ಯ ಸರಕಾರ ಮತ್ತೊಂದೆಡೆ ಅಸಹಕಾರ ನೀಡುತ್ತಿದೆ. ಪ್ರತಿಯೊಂದಕ್ಕೂ ಕೇಂದ್ರ ಸರಕಾರವನ್ನು ನಿಂದಿಸಿದರೆ ಉಪಯೋಗವಿಲ್ಲ. ಸಮಸ್ಯೆ ಬಗ್ಗೆ ಸಿಎಂ ಸಭೆ ಕರೆಯಲಿ. ಏನು ಸಮಸ್ಯೆ ಇದೆ ಅಂತಾ ಚರ್ಚೆ ಮಾಡೋಣ. ಸಮಸ್ಯೆ ಇದ್ದರೆ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಈ ಬಗ್ಗೆ ಪತ್ರ ಬರೆಯುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

RNIL ಉದಾಹರಣೆ ಕೊಟ್ಟ ಕೇಂದ್ರ ಸಚಿವರು

ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಸಂಕಷ್ಟದಲ್ಲಿ ಇತ್ತು. ನಿರ್ವಹಣಾ ಬಂಡವಾಳ ಇಲ್ಲದೆ ಸೊರಗಿತ್ತು. ಏಕಾಏಕಿ 4500 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಆದರೆ, ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಒತ್ತಾಸೆಯ ಮೇರೆಗೆ ಕೇವಲ ನಲವತ್ತೆಂಟು ಗಂಟೆಗಳ ಒಳಗಾಗಿ ಅಷ್ಟೂ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ನೆರೆ ರಾಜ್ಯದಲ್ಲಿ ನಮಗೆ ಇಂತಹ ಉತ್ತಮ ಸಹಕಾರ ಸಿಗುತ್ತಿದೆ. ಆದರೆ, ನಮ್ಮದೇ ರಾಜ್ಯ ಕರ್ನಾಟಕದಲ್ಲಿ ಸಹಕಾರ ಸಿಗುತ್ತಿಲ್ಲ. ಒಬ್ಬ ಕೇಂದ್ರ ಮಂತ್ರಿಯನ್ನು ನಡೆಸಿಕೊಳ್ಳುವ ರೀತಿಯೇ ಇದು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಯಾರೂ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ

ಹಾದಿಬೀದಿಯಲ್ಲಿ ಹೇಳಿಕೆ ನೀಡುತ್ತಾ ಹೋದರೆ ರಾಜ್ಯದ ಅಭಿವೃದ್ಧಿ ಆಗುತ್ತದೆಯೇ? ರಾಜ್ಯ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುವುದನ್ನು ಬಿಡಬೇಕು. ಇಲ್ಲಿ ರಾಜಕಾರಣ ಮುಖ್ಯವಲ್ಲ. ಅದೇನಿದ್ದರೂ ಚುನಾವಣೆಗೆ ಸೀಮಿತ. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾಕೆ ಬೇಕು? ಇಲ್ಲಿಯವರೆಗೂ ಒಬ್ಬರೂ ನನ್ನ ಬಳಿ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ. ಎಂ.ಬಿ.ಪಾಟೀಲ್ ಒಬ್ಬರು ದೆಹಲಿಯ ನನ್ನ ಸಚಿವಾಲಯಕ್ಕೆ ಬಂದು ಕೈಗಾರಿಕೆ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದ್ದು ಬಿಟ್ಟರೆ ಯಾರೊಬ್ಬರೂ ನನ್ನೊಂದಿಗೆ ರಾಜ್ಯದ ಬಗ್ಗೆ ಚರ್ಚೆ ಮಾಡಿಲ್ಲ. ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದಾರೆ. ಹೀಗೆ ಮಾಡಿದರೆ ಮೇಕೆದಾಟುಗೆ ಅನುಮತಿ ದೊರೆಯುತ್ತದೆಯೇ? ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.

ದಯಮಾಡಿ ಇವರು ಚಿಲ್ಲರೆ ರಾಜಕಾರಣ ಬಿಡಬೇಕು. ಟೊಯೊಟಾ ಸೇರಿದಂತೆ ಅನೇಕ ಕೈಗಾರಿಕೆಗಳು ರಾಜ್ಯ ಬಿಟ್ಟು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿವೆ. ಶಾಸಕ ರಾಜುಕಾಗೆ ಅಭಿವೃದ್ಧಿ ಅನುದಾನ ಬಗ್ಗೆ ಏನು ಹೇಳಿದ್ದಾರೆ. ಅರಣ್ಯ ಸಚಿವರು ಅವರ ಬಳಿ ಇರುವ ದಾಖಲೆಗಳನ್ನು ತೆಗೆದುಕೊಂಡು ಬರಲಿ. ನಾನು ಕುಳಿತುಕೊಳ್ಳುತ್ತೇನೆ. ಅವರೂ ಬರಲಿ, ಸಭೆಯಲ್ಲಿ ಎಲ್ಲಾ ಚರ್ಚೆಯಾಗಲಿ. ಸಭೆ ಯಾಕೆ ಕರೆಯಲಾಗುತ್ತಿಲ್ಲ. ಎಲ್ಲಾ ದಾಖಲೆ ಸಮೇತ ಚರ್ಚೆ ಮಾಡೋಣ. ಈಶ್ವರ್ ಖಂಡ್ರೆ ಬೋಗಸ್ ಹೇಳಿಕೆ ನೀಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಮಾಧ್ಯಮಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಟಿ.ಎ.ಜವರಾಯ ಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

12 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

3 hours ago