Mysore
20
broken clouds

Social Media

ಭಾನುವಾರ, 25 ಜನವರಿ 2026
Light
Dark

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮ ಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಇದನ್ನು ಓದಿ : ಸಮೀಕ್ಷೆಗೆ ಮಾಹಿತಿ ನೀಡಿದರೆ ಮುಂದಿನ ಪೀಳಿಗೆಗೆ ಅನುಕೂಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ? ಎಂದು ಪ್ರಶ್ನಿಸಿದರು.

ಇನ್ನು ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ, ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರದ ಕ್ರಮವೇನು ಎಂಬುದಕ್ಕೆ ಉತ್ತರಿಸಿದ ಅವರು, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

Tags:
error: Content is protected !!