ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ದೇವನಹಳ್ಳಿಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವಗುರು ಬಸವೇಶ್ವರರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣಿಗಾಗಿ, ಹೊನ್ನಿಗಾಗಿ, ಮಣ್ಣಿಗಾಗಿ ಜಗತ್ತಿನಲ್ಲಿ ಕ್ರಾಂತಿ ಆಗಿದೆ. ಆದರೆ ಸರ್ವರ ಸಮಾನತೆಗಾಗಿ ಯಾವುದಾದರೂ ಕ್ರಾಂತಿ ನಡೆದಿದ್ದರೆ ಅದು ಕಲ್ಯಾಣದ ಕ್ರಾಂತಿ ಮಾತ್ರ ಎಂದು ಹೇಳಿದರು.
12ನೇ ಶತಮಾನದಲ್ಲಿ ಮನುಷ್ಯರನ್ನು ಮನುಷ್ಯರಂತೆ ಕಾಣುತ್ತಿರಲಿಲ್ಲ. ಮೌಢ್ಯತೆ ಇತ್ತು, ಅನಕ್ಷರತೆ ಇತ್ತು, ಹೆಣ್ಣಿಗೆ ಸಮಾನತೆ ಇರಲಿಲ್ಲ. ಅಂತಹ ಕಾಲಘಟ್ಟದಲ್ಲಿ ಸ್ವಾತಂತ್ರ್ಯ, ಸಮಾನತೆ, ಕಾಯಕ, ದಾಸೋಹ, ಸಹೋದರತ್ವ, ಸಹಬಾಳ್ವೆಯ ತಳಹದಿಯ ಮೇಲೆ ಬಲಿಷ್ಠ ಸುಂದರ ಸಮಾಜದ ನಿರ್ಮಾಣಕ್ಕೆ ವಿಶ್ವಗುರು ಬಸವಣ್ಣನವರ ನೇತೃತ್ವದಲ್ಲಿ ವೈಚಾರಿಕ ಮತ್ತು ವೈಜ್ಞಾನಿಕತೆಯ ತಳಹದಿಯ ಮೇಲೆ ಕ್ರಾಂತಿ ನಡೆಯಿತು. ಶ್ರೇಣಿರಹಿತ, ವರ್ಗರಹಿತ, ಲಿಂಗಭೇದ ರಹಿತ ಸಮ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು ಶ್ರಮಿಸಿದರು ಎಂದರು.
ಇಡೀ ಜಗತ್ತಿಗೆ ಪ್ರಪ್ರಥಮವಾಗಿ ಸಾಮಾಜಿಕ ನ್ಯಾಯಕೊಟ್ಟ ಸಮುದಾಯ ಯಾವುದಾದರೂ ಇದ್ದರೆ ಅದು ಸರ್ವರಿಗೂ ಲೇಸನ್ನೇ ಬಯಸಿದ ಸಮುದಾಯ ವೀರಶೈವ ಲಿಂಗಾಯತ ಸಮುದಾಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಈಶ್ವರ ಖಂಡ್ರೆ ಪ್ರತಿಪಾದಿಸಿದರು.
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳಿನ ಕಲ್ಪನೆಯನ್ನು ನೀಡಿ, ವಿಶ್ವದ ಪ್ರಥಮ ಸಂಸತ್ತು ಅನುಭವ ಮಂಟಪ ಸ್ಥಾಪಿಸಿದರು. ಅಲ್ಲಿ 770 ವಿವಿಧ ವೃತ್ತಿಯ, ವಿವಿಧ ಸಮುದಾಯದ ಅಮರಗಣಂಗಳು ಪಾಲ್ಗೊಳ್ಳುತ್ತಿದ್ದರು. ಅವರೆಲ್ಲರೂ ವಚನಗಳನ್ನು ರಚಿಸಿದ್ದಾರೆ. ಪ್ರಜಾಪ್ರಭುತ್ವದ ಪರಿಕಲ್ಪನೆಗೆ ತಳಹದಿಯಾದ ಅನುಭವ ಮಂಟಪ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿದೆ ಎಂದರು.
2015ರಲ್ಲಿ ತಾವು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ಮಾಡಿದ ಮನವಿಗೆ ಮನ್ನಣೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಘೋಷಿಸಿದರು. ಇತ್ತೀಚೆಗೆ ಆಧುನಿಕ ಅನುಭವ ಮಂಟಪ ಕಾಮಗಾರಿಗೆ 105 ಕೋಟಿ ಬಿಡುಗಡೆ ಮಾಡುವುದರೊಂದಿಗೆ ಈವರೆಗೆ 280 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಕಾಮಗಾರಿ ಭರದಿಂದ ಸಾಗಿದ್ದು, ಮುಂದಿನ ವರ್ಷದೊಳಗೆ ಇದರ ಲೋಕಾರ್ಪಣೆ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಸುತ್ತೂರು ಮಹಾ ಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಸಂಸದ ಸುಧಾಕರ್, ಶಾಸಕರಾದ ಧೀರಜ್ ಮುನಿರಾಜ್, ಶರತ್ ಬಚ್ಚೇಗೌಡ ಮತ್ತಿತರರು ಪಾಲ್ಗೊಂಡಿದ್ದರು.





