Mysore
32
few clouds

Social Media

ಗುರುವಾರ, 19 ಮಾರ್ಚ್ 2026
Light
Dark

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಶುಭಾಶಯ ಕೋರಿದರು.

ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, ಮೂರು ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾಗ್ಯೂ ಎರಡನೇ ಹಂತ, ಮೂರನೇ ಹಂತದಲ್ಲಿ ಪರೀಕ್ಷೆಗೆ ಅವಕಾಶ ಇರುವುದರಿಂದ ಯಾವುದೇ ವಿದ್ಯಾರ್ಥಿಗಳು ಆತಂಕಗೊಳ್ಳದೇ ಪರೀಕ್ಷೆಯನ್ನು ಎದುರಿಸುವಂತೆ ತಿಳಿಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ ಬರೆಯಲು ತಿಳಿಸಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಶುಭಾಶಯ ಕೋರಿ, ಈ ಹಿಂದೆ ಮಕ್ಕಳು ಒತ್ತಡದಿಂದ ಪರೀಕ್ಷೆಗೆ ಹಾಜರಾಗುತ್ತಿದ್ದರು. ಈಗ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಮೂರು ಹಂತದಲ್ಲಿ ಪರೀಕ್ಷೆಗಳು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ಆತಂಕಪಡದೇ ಪರೀಕ್ಷೆಗೆ ಹಾಜರಾಗಲು ತಿಳಿಸಿ, ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

ಇದೇ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ರವರು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ, ಪೋಷಕರು ಮಕ್ಕಳಿಗೆ ಮಾನಸಿಕ ಹಿಂಸೆ ನೀಡಬಾರದು ಎಂದು ಕಿವಿಮಾತು ಹೇಳಿದರು. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದೆ ಎಂದು ಸುದ್ದಿಗಳು ಬರುತ್ತಿವೆ. ಈ ಬಗ್ಗೆ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಎಚ್ಚರಿಕೆ ನೀಡುವಂತೆ ತಿಳಿಸಿದರು.

Tags:
error: Content is protected !!