ಬೆಂಗಳೂರು: ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಜಲಾಶಯಗಳು ಕೂಡ ಸಂಪೂರ್ಣ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭೂಕುಸಿತ ಪ್ರಕರಣಗಳು ವರದಿಯಾಗುತ್ತಿದ್ದು, ಅವುಗಳ ಬಗ್ಗೆಯೂ ಎಚ್ಚರ ವಹಿಸಬೇಕು. ಇದರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಿದರು.
ಅಧಿಕಾರಿಗಳು ಎಲ್ಲಾ ಜಿಲ್ಲೆಗಳಲ್ಲಿಯೂ ಕಾಳಜಿ ಕೇಂದ್ರಗಳನ್ನು ತೆರೆದು ಸಂತ್ರಸ್ತರಿಗೆ ಎಲ್ಲಾ ಸೌಲಭ್ಯ ಕಲ್ಪಿಸಬೇಕು. ಈ ಮೂಲಕ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಎಲ್ಲರೂ ಸಜ್ಜಾಗುವಂತೆ ಕರೆ ನೀಡಿದರು.