ದಕ್ಷಿಣ ಕನ್ನಡ : ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಕುರಿತ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ರಾಜ್ಯ ಸರ್ಕಾರ ರಚಿಸಿದೆ.
ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗಿಂಡ ತಂಡ ಇದಾಗಿದ್ದು, ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ಅವರ ನೇತೃತ್ವದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್ ಅನುಚೇತನ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಇದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ತಾನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬರು ಈಚೆಗೆ ನ್ಯಾಯಾಲಯದಲ್ಲಿ ಹೇಳಿಕೆ ಕೊಟ್ಟಿದ್ದರು. ಎರಡು ದಶಕಗಳಲ್ಲಿ ಅತ್ಯಾಚಾರ, ಹತ್ಯೆ ಮತ್ತು ದೌರ್ಜನ್ಯಗಳೂ ಈ ಭಾಗದಲ್ಲಿ ನಡೆದಿವೆ ಎಂದು ಅವರು ಹೇಳಿದ್ದರು. ಇದರ ನಂತರ ಭಾರತೀಯ ನ್ಯಾಯ ಸಂಹಿತದ ಕಲಂ 211(ಎ) ಅಡಿಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಶೀಘ್ರದಲ್ಲೇ ತನಿಖಾ ತಂಡಕ್ಕೆ ವರ್ಗಾಯಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.





