ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸ್ಥಳೀಯ ಕನ್ನಡಿಗರನ್ನು ಉದ್ಯೋಗಾವಕಾಶಗಳಿಂದ ವಂಚಿಸಲಾಗುತ್ತಿದೆ ಎಂಬ ವಿಷಯ ತಿಳಿದು ನೋವಾಗಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಕನ್ನಡಿಗರಿಗೇ ಅಗ್ರಸ್ಥಾನ. ಯಾವುದೇ ಕಾರಣಕ್ಕೂ ಕನ್ನಡಿಗರ ಹಕ್ಕುಗಳು, ಗೌರವ ಹಾಗೂ ಅವಕಾಶಗಳನ್ನು ಕಡೆಗಣಿಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕನ್ನಡಿಗರನ್ನು ಕಡೆಗಣಿಸುವ ಐಟಿ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದ್ದಾರೆ.
ವಿಶ್ವವೇ ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದೆ. ಕನ್ನಡಿಗರ ಪ್ರತಿಭೆ, ಕೌಶಲ್ಯ ಹಾಗೂ ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ ಎಂದು ಡಿಕೆಶಿ ಹೇಳಿದ್ದಾರೆ.




