Mysore
28
scattered clouds

Social Media

ಭಾನುವಾರ, 25 ಜನವರಿ 2026
Light
Dark

ಪರಿಶಿಷ್ಟರ ಮೇಲೆ ದೌರ್ಜನ್ಯ | ಪೊಲೀಸರ ಶಾಮೀಲು ಕಂಡು ಬಂದರೆ ಕಠಿಣ ಕ್ರಮ : ಸಿಎಂ ಎಚ್ಚರಿಕೆ

cm siidarmaiah

ಬೆಂಗಳೂರು : ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳ ಜೊತೆ ಶಾಮೀಲಾಗಿರುವುದು ಕಂಡು ಬಂದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.

ಕಳೆದ ಆರು ತಿಂಗಳಲ್ಲಿ ಶೇ.84ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸ್ಪಷ್ಟ ಸೂಚನೆ ನೀಡಿದರು.

ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸೂಚನೆ ನೀಡಿದರು.

ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಚಿವರಾದ ಹೆಚ್‌.ಕೆ.ಪಾಟೀಲ್‌, ಹೆಚ್‌.ಸಿ.ಮಹದೇವಪ್ಪ, ಆರ್‌.ಬಿ.ತಿಮಾಪುರ ಸೇರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!