ಬೆಂಗಳೂರು: ಲೋಕಸಭೆ ಚುನಾವಣೆಯ ಜೊತೆಗೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಕೇಂದ್ರ ಚುನಾವಣಾ ಆಯೋಗ ಶನಿವಾರ ಉಪ ಚುನಾವಣೆ ಘೋಷಿಸಿದೆ.
ಇದೇ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಇದರೊಂದಿಗೆ ಸುರಪುರ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದೆ.
ಲೋಕಸಭಾ ಚುನಾವಣೆ ಜೊತೆಯಲ್ಲಿ ದೇಶದ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ 26 ವಿಧಾನಸಭಾ ಕ್ಷೇತ್ರಗಳ ಪೈಕಿ ಕರ್ನಾಟಕದ ಸುರಪುರ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ.
ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರ ಅಕಾಲಿಕ ನಿಧನದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಮೇ 7 ರಂದು ಉಪ ಚುನಾವಣೆ ನಡೆಯಲಿದ್ದು, ಜೂನ್ 4ರಂದೇ ಲೋಕಸಭಾ ಚುನಾವಣೆ ಜೊತೆಯಲ್ಲಿಯೇ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.






