ದಾವಣಗೆರೆ: ರಾಜ್ಯ ಸರ್ಕಾರ ಅನ್ನದಾತರ ಬಗ್ಗೆ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಡಿಸೆಂಬರ್.13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ ನಡೆಸಲಾಗುವುದು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿಂದು ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು, ರಾಜ್ಯ ಸರ್ಕಾರ ಚುನಾವಣೆಗೂ ಮುನ್ನ ಕೃಷಿಗೆ ಸಂಬಂಧಿಸಿದಂತೆ ಘೋಷಣೆ ಮಾಡಿದ್ದ ಯೋಜನೆಗಳನ್ನು ಮರೆತು ಹೋಗಿದೆ. ಬಗರ್‌ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡಿಲ್ಲ ಎಂದು ಕಿಡಿಕಾರಿದರು.
ವಕ್ಫ್ ಮಂಡಳಿಯ ಆಸ್ತಿಯ ನೆಪದಲ್ಲಿ ರಾಜ್ಯದ ಹಲವಾರು ರೈತರಿಗೆ ನೋಟಿಸ್ ನೀಡಲಾಗಿದೆ. ಸರ್ಕಾರದ ಈ ಕ್ರಮದಿಂದ ರೈತರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯ ಇಲಾಖೆ ಸಣ್ಣ ರೈತರಿಗೆ ಕಿರುಕುಳ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೈತರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಬೇಕು. ಈ ಹಿನ್ನೆಲೆಯಲ್ಲಿ ಡಿಸೆಂಬರ್.13ರಂದು ಸುವರ್ಣಸೌಧ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.