ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಪರಿಸರವಾದಿ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯ ಸಮೀಪ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.
ದೀರ್ಘ ಕಾಲದ ಅನಾರೋಗ್ಯದಿಂದ ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ಸಾಲು ಮರದ ತಿಮ್ಮಕ್ಕ ನಿಧನರಾಗಿದರು. ಈ ಮೊದಲು ಅವರು ವಾಸಿಸುತ್ತಿದ್ದ ಬೇಲೂರಿಗೆ ಪಾರ್ಥಿವ ಶರೀರವನ್ನು ನಿನ್ನೆ ತೆಗೆದುಕೊಂಡು ಹೋಗಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಇಂದು ಬೆಳಗ್ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಇದನ್ನು ಓದಿ: ಇಂದು ಮಧ್ಯಾಹ್ನ ಕಲಾ ಗ್ರಾಮದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೇಂದ್ರ ಸಚಿವ ವಿ. ಸೋಮಣ್ಣ, ಸಚಿವೆ ಶೋಭಾ ಕರಂದ್ಲಾಜೆ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ಸೇರಿದಂತೆ ಅನೇಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಅಂತ್ಯಕ್ರಿಯೆ ಸ್ಥಳ ನಿಗದಿ ಬಗ್ಗೆ ಒಂದಿಷ್ಟು ಗೊಂದಲಗಳಾಗಿದ್ದವು. ಸಾಲು ಮರದ ತಿಮ್ಮಕ್ಕ ಅವರ ಸಂಬಂಧಿಕರು ಅವರು ಬಾಳು ಬದುಕಿದ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದಲ್ಲಿ ಪತಿಯ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರ ಮಾಡಬೇಕೆಂದು ಪಟ್ಟು ಹಿಡಿದರು.
ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಅಜ್ಜಿ ಸಾಯುವ ಮುನ್ನವೇ ಎಲ್ಲಿ, ಯಾವ ರೀತಿ ಸಂಸ್ಕಾರವಾಗಬೇಕು ಎಂಬುದು ಸೇರಿದಂತೆ ಎಲ್ಲಾ ವಿಚಾರಗಳನ್ನು ವಿಲ್‍ನಲ್ಲಿ ಬರೆದಿದ್ದಾರೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯ ಸಮೀಪ ಕಲಾಗ್ರಾಮದಲ್ಲಿ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಮೇಲೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜವನ್ನು ಹೊದಿಸಿದರು. ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಿತು.





