ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಕಿರುಕುಳದಿಂದ ಜನರು ಬೇಸುತ್ತಿರುವ ಬೆನ್ನಲ್ಲೇ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದಿಂದಲೇ ಜನಸಾಮಾನ್ಯರಿಗೆ ಸಾಲ ನೀಡುವ ಕೆಲಸಗಳಾಗಬೇಕು ಎಂದು ಆಗ್ರಹಿಸಿದ್ದಾರೆ.
ಬಡ ಮತ್ತು ಮಧ್ಯಮವರ್ಗದ ಜನರು ತುರ್ತು ಸಂದರ್ಭದಲ್ಲಿ ಸಾಲ ತೆಗೆದುಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಜನಸಾಮಾನ್ಯರಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದ್ದ ಕಾನೂನಿನಲ್ಲೇ ಕ್ರಮ ಕೈಗೊಳ್ಳಬಹುದಿತ್ತು. ಹೊಸ ಕಾನೂನು ತರುವ ಅವಶ್ಯಕತೆ ಇರಲಿಲ್ಲ. ಸಿಎಂ ಸುಮ್ಮನೇ ತೋರಿಕೆಗೆ ಸಭೆ ನಡೆಸಿದ್ದಾರೆ. ಈ ರೀತಿ ತೋರಿಕೆಗೆ ಸಭೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡುವುದು ಸಮಂಜಸವಲ್ಲ. ಈಗಾಗಲೇ ಇರುವಂತಹ ಕಾನೂನಿನಲ್ಲಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದರು.





