ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು ನೀಡಿದ್ದ ಮನವಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ರವಾನಿಸಲಾಗಿದ್ದು, ಇಲಾಖೆಯವರು ಆಂತರಿಕವಾಗಿ ಆದೇಶ ಮಾಡಿಕೊಳ್ಳುತ್ತಾರೆ. ಇದಕ್ಕೆ ಸರ್ಕಾರದ ಆದೇಶ ಅಗತ್ಯವಿಲ್ಲ ಎಂದರು.
ಸಿಐಡಿ ತನಿಖೆಗೆ ಅಧಿಕೃತ ಆದೇಶ ಆಗಿಲ್ಲ ಎಂಬ ಕುರಿತು ಪ್ರತಿಕ್ರಿಯಿಸಿದ ಅವರು, ತನಿಖೆ ನಡೆಯುತ್ತಿದೆ. ಅದು ಪೂರ್ಣಗೊಳ್ಳುವವರೆಗೂ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ನನಗೂ ಮಾಹಿತಿ ಇಲ್ಲ ಎಂದರು.
ಸಂಪುಟ ಪುನರ್ ರಚನೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.2 ರಂದು ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಹಿಂದೆ ತಾವು ಉಪಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಭವನದ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. ಈಗ ಅದರ ಉದ್ಘಾಟನೆಯಾಗುತ್ತಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಯಾರೂ ತಮ್ಮನ್ನು ಆಹ್ವಾನಿಸಿಲ್ಲ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ ಎಂದು ಹೇಳಿದರು.
ಇನ್ನು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಲು ಮೂರು ತಿಂಗಳ ಹಿಂದೆಯೇ ನಾನು ಪಟ್ಟಿ ಸಿದ್ಧಪಡಿಸಿ ಸಿಎಂಗೆ ನೀಡಿದ್ದೇನೆ. ಅದರ ಕುರಿತು ಯಾವ ನಿರ್ಧಾರ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ನನಗೆ ವಹಿಸಿದ್ದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಎಲ್ಲಾ ಶಾಸಕರ ಹೆಸರನ್ನು ಪರಿಶೀಲಿಸಿ ಯಾವುದಕ್ಕೆ ಯಾರನ್ನು ನೇಮಿಸಬೇಕು ಎಂಬ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸಲಾಗಿದೆ. ನಾನು ಕೊಟ್ಟ ವರದಿಯನ್ನು ಬದಲಾವಣೆ ಮಾಡುವುದಾದರೆ ಅದು ಸಿಎಂ ಸಿದ್ದರಾಮಯ್ಯರಿಗೆ ಸೇರಿದ ವಿಚಾರ ಎಂದರು.





