ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸರ್ಕಾರ ರಚನೆ ಮಾಡಿದೆ. ಈ ಬಾರಿಯ ಚುನಾವಣೆಯಲ್ಲಿ ನಾಲ್ವರು ಪಕ್ಷೇತರ ಶಾಸಕರು ಆಯ್ಕೆಯಾಗಿದ್ದರು.
ಬುಧವಾರದಿಂದ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರ ಬಲ 136ಕ್ಕೆ ಏರಿಕೆಯಾಗಿದೆ. ಕಾಂಗ್ರೆಸ್ ಪಕ್ಷದ 135 ಶಾಸಕರು ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಪಕ್ಷೇತರ ಶಾಸಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇದನ್ನು ಅನುಮೋದಿಸಿದೆ.
ವಿಧಾನಸೌಧದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಜಯಗಳಿಸಿರುವ ಲತಾ ಮಲ್ಲಿಕಾರ್ಜುನ ಪಾಲ್ಗೊಂಡಿದ್ದರು. ಅವರು ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವನ್ನು ಘೋಷಣೆ ಮಾಡಿದೆ. ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಹ ಸದಸ್ಯರನ್ನಾಗಿ ಅನುಮೋದಿಸಲಾಗಿದೆ.
ಎಂ. ಪಿ. ಪ್ರಕಾಶ್ ಪುತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಟ್ವಿಟ್ ಮಾಡಿದ್ದಾರೆ. ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಕಾಂಗ್ರೆಸ್ ಪಕ್ಷದ ಸಹ ಸದಸ್ಯರಾಗಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಸದನದಲ್ಲಿ ನಡೆಯುವ ಎಲ್ಲಾ ಪ್ರಕ್ರಿಯೆಯಲ್ಲಿ ಲತಾ ಮಲ್ಲಿಕಾರ್ಜುನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಂ. ಪಿ. ಲಾ ಮಲ್ಲಿಕಾರ್ಜುನ 69,152 ಮತಗಳನ್ನು ಪಡೆದು ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಲತಾ ಮಲ್ಲಿಕಾರ್ಜುನ ಕರ್ನಾಟಕದ ಉಪಮುಖ್ಯಮಂತ್ರಿಯಾಗಿದ್ದ ರಾಜ್ಯದ ಸಜ್ಜನ ರಾಜಕಾರಣಿ ಎಂ. ಪಿ. ಪ್ರಕಾಶ್ ಪುತ್ರಿ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದ ಬಳಿಕ ಲತಾ ಮಲ್ಲಿಕಾರ್ಜುನ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಭೇಟಿ ಮಾಡಿದ್ದರು. ಆಗಲೇ ಅವರು ಕಾಂಗ್ರೆಸ್ ಪಕ್ಷ ಬೆಂಬಲಿಸಲಿದ್ದಾರೆ ಎಂಬ ನಿರೀಕ್ಷೆ ಇತ್ತು.
ಈ ಬಾರಿಯ ಚುನಾವಣೆಯಲ್ಲಿ ಲತಾ ಮಲ್ಲಿಕಾರ್ಜುನ ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಎನ್. ಕೊಟ್ರೇಶಿಗೆ ಟಿಕೆಟ್ ನೀಡಿತ್ತು. ಇದರಿಂದ ಅಸಮಾಧಾನಗೊಂಡ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಬಿಜೆಪಿಯ ಕರುಣಾಕರ ರೆಡ್ಡಿ (55590 ಮತ), ಕಾಂಗ್ರೆಸ್ನ ಎನ್. ಕೊಟ್ರೇಶಿ (44408 ಮತ), ಜೆಡಿಎಸ್ನ ಎನ್. ಎಂ. ನೂರು ಅಹ್ಮದ್ (705 ಮತ) ಸೋಲಿಸಿ ಶಾಸಕಿಯಾಗಿ ಆಯ್ಕೆಯಾಗಿದ್ದರು.
ಹರಪನಹಳ್ಳಿ ದಿ. ಎಂ. ಪಿ. ಪ್ರಕಾಶ್ ತವರು ಕ್ಷೇತ್ರ. ಈ ಸಲದ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಎಂ. ಪಿ. ಪ್ರಕಾಶ್ ಪುತ್ರಿಯರಾದ ಎಂ. ಪಿ. ಲತಾ, ಎಂ. ಪಿ. ವೀಣಾ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಒಬ್ಬರಿಗೆ ಟಿಕೆಟ್ ನೀಡುತ್ತೇವೆ ಯಾರಿಗೆ ಎಂದು ತೀರ್ಮಾನಿಸಿ ಎಂದು ಹೇಳಿತ್ತು.
ಆದರೆ ಇಬ್ಬರ ನಡುವೆ ಒಮ್ಮತ ಮೂಡಲಿಲ್ಲ. ಅಂತಿಮವಾಗಿ ಪಕ್ಷ ಎನ್. ಕೊಟ್ರೇಶಿಯನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿತು. ಆಗ ಎಂ. ಪಿ. ಲತಾ ಮಲ್ಲಿಕಾರ್ಜುನ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಲತಾ ಮಲ್ಲಿಕಾರ್ಜುನ ಸಹೋದರ ಎಂ. ಪಿ. ರವೀಂದ್ರ 2013ರಲ್ಲಿ ಹರಪನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. 2018ರ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು. 2018ರ ಚುನಾವಣೆ ಬಳಿಕ ಅವರು ನಿಧನ ಹೊಂದಿದ್ದರು.