ಬೆಂಗಳೂರು : ಕಾವೇರಿ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದ್ದು, ಕರ್ನಾಟಕ ಬಂದ್ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರವು ಕನ್ನಡಿಗರ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಆಗ್ರಹಿಸಿದ್ದಾರೆ.
ನಾಡು, ನುಡಿ, ನೆಲಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ, ಐಕ್ಯತೆ ನೆರೆಯ ರಾಜ್ಯಗಳಿಗೆ ಎಚ್ಚರಿಕೆ ಗಂಟೆಯಾಗಬೇಕು. ಕಾವೇರಿ ನಮ್ಮದು ಎಂದು ಅವರು ತಿಳಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಪರ ಸಂಘಟನೆಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನೀಡಿದ್ದ ಇಂದಿನ ಕರ್ನಾಟಕ ಬಂದ್ಗೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತ್ತು.