ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಅದನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ. ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆಯಲ್ಲಿ ಏನಾದರೂ ಲೋಪಗಳಾಗಿದ್ದರೆ ಆಗ ಬೇರೆ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ಪ್ರಕಾರವೇ ತನಿಖೆ ಮಾಡುತ್ತೇವೆ ಎಂದರು.
ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮದು ಒಂದೇ ಕುಟುಂಬ. ಇದು ಕೇವಲ ಸೌಜನ್ಯ ಭೇಟಿ ಅಷ್ಟೇ. ನಾವು ರಾಜಕೀಯದ ಬಗ್ಗೆ ಏನನ್ನೂ ಮಾತನಾಡಿಲ್ಲ ಎಂದು ಹೇಳಿದರು.