Mysore
30
few clouds

Social Media

ಬುಧವಾರ, 28 ಜನವರಿ 2026
Light
Dark

ಇದು ಮೈತ್ರಿ ಹೋರಾಟಕ್ಕೆ ಸಂದ ಜಯ: ನಿಖಿಲ್‌ ಕುಮಾರಸ್ವಾಮಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಷಿಕ್ಯೂಷನ್‌ ಬಗ್ಗೆ ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದು, ಸಿಎಂ ವಿಚಾರಣೆಗೆ ಅನುಮತಿ ನೀಡಿರುವುದು ಮೈತ್ರಿ ಹೋರಾಟಕ್ಕೆ ಸಂದ ಜಯ ಎಂದು ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಗೌರವಾನ್ವಿತ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ. ಈ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್, ಬಿಜೆಪಿ ಪಕ್ಷಗಳು ಬೆಂಗಳೂರಿನಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದ್ದನ್ನು ಸ್ಮರಿಸಬಹುದು.

ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಕ್ರಮ ಸಾಬೀತುಪಡಿಸಿದೆ. ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ.

ಮಾನ್ಯ ಮುಖ್ಯಮಂತ್ರಿಗಳಿಗೆ ಅನ್ಯ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ, ನಮ್ಮ ಹೋರಾಟ ನಿರಂತರ ಎಂದು ಪೋಸ್ಟ್‌ ಹಂಚಿಕೊಂಡಿದ್ದು, ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.

https://x.com/Nikhil_Kumar_k/status/1824692439640080832

Tags:
error: Content is protected !!