ಸಮಯ ವ್ಯರ್ಥ ಮಾಡುವುದಿಲ್ಲ, ರಾಜ್ಯದ ಸಮಸ್ಯೆಗೆ ಪರಿಹಾರ ದೊರಕಿಸುವೆ: ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು: ಮೋದಿ ಅವರ ಸಂಪುಟದಲ್ಲಿ ಎರಡು ದೊಡ್ಡ ಖಾತೆ ಸಿಕ್ಕಿದೆ. ಸಮಯ ವ್ಯರ್ಥ ಮಾಡುವುದಿಲ್ಲ ನಮ್ಮ ರಾಜ್ಯದ ಸಮ್ಯಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಇಂದು( ಜೂ.14) ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿ, ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕೃಷಿ ಸಚಿವರಾಗಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿದೆ. ನರೇಂದ್ರಮೋದಿ ಅವರು ಎರಡು ದೊಡ್ಡ ಖಾತೆಗಳ ಜವಾಬ್ದಾರಿಯನ್ನು ನೀಡಿದ್ದಾರೆ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ. ಎಲ್ಲಾ ಇಲಾಖೆಯಲ್ಲಿನ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.

ಜೆಡಿಎಸ್‍ನ್ನು ಮುಗಿಸಿದ್ದೇವೆ ಎಂದು ದುರಹಂಕಾರದಲ್ಲಿ ಮಾತನಾಡಿರುವವರಿಗೆ ಉತ್ತರ ಕೊಡುವುದಿಲ್ಲ. ನನಗೆ ಬೇಕಾಗಿರುವುದು ರಾಜಕೀಯವಲ್ಲ ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಎಂದು ಹೇಳಿದರು.

ಲೋಕಸಭೆ ಚುನಾವಣೆ ಸಮಯದಲ್ಲಿ ರಾಜ್ಯ ರಾಜಕಾರಣ ಯಾವ ರೀತಿ ನಡೆಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಎಲ್ಲವನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ರೈತರ ಕೃಷಿಗೆ ತೊಂದರೆಯಾಗದಂತೆ ಕಾರ್ಖಾನೆಗಳು ಕೆಲಸ ಮಾಡುವಂತೆ ಮಾಡುತ್ತೇನೆ. ನಾಲ್ಕು ದಿನ ದೆಹಲಿಯಲ್ಲಿ ಕೆಲಸ ಮಾಡುವೆ. ಎರಡು ದಿನ ಕರ್ನಾಟಕದಲ್ಲಿರುತ್ತೇನೆ. ಅದರಲ್ಲೂ ಮಂಡ್ಯದಲ್ಲಿ ಇರುತ್ತೇನೆ ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ನಮ ಸ್ವಯಂಕೃತ ಅಪರಾಧಗಳಿಂದ ಸೋತಿದ್ದೇವೆ ಎಂದ ಅವರು, ಪ್ರಧಾನಿ ನರೇಂದ್ರಮೋದಿಯವರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವರಾದ ಬಳಿಕ ನನ್ನ ಕರ್ಮಭೂಮಿಗೆ ಬಂದಿದ್ದೇನೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಅದರಲ್ಲೂ ವಿಶೇಷವಾಗಿ ರಾಮನಗರ ಮತ್ತು ಮಂಡ್ಯ ಜಿಲ್ಲೆ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ಸಂದಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ರಮೇಶ್ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಮತ್ತಿತರರು ಇದ್ದರು.