ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದು ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ನೀಡಿರುವುದನ್ನು ಪೊಲಿಟಿಕಲ್ ತೀರ್ಪು ಎಂದು ಕರೆದಿದ್ದಾರೆ. ಹೀಗಾಗಿ ಜಮೀರ್ ಅಹಮ್ಮದ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿಗೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ದೂರು ನೀಡಿದ್ದಾರೆ.
ಇನ್ನು ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ಹೈಕೋರ್ಟ್ ಆದೇಶ ಒಂದು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ಜಮೀರ್ ಹೇಳಿಕೆಗೆ ಎಲ್ಲಾ ಕಡೆ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಜಮೀರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಎಜಿಗೆ ದೂರು ನೀಡಿದ್ದಾರೆ.