ಬೆಂಗಳೂರು: ರಾಮನಗರವನ್ನು ಬೆಂಗಳೂರಿನ ದಕ್ಷಿಣ ಕ್ಷೇತ್ರ ಎಂದು ಹೆಸರು ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹೆಸರು ಬದಲಾವಣೆ ಮಾಡುವ ಯೋಜನೆಯಲ್ಲಿದೆ.
ಎಲೆಕ್ಟ್ರಾನಿಕ್ ಸಿಟಿಯ ಹೆಸರನ್ನ ಬದಲಿಸುವುದಾಗಿ ಇಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ನಾಮಕರಣ ಮಾಡಲಾಗುವುದು. ಅಲ್ಲದೇ ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹಿಂದುಳಿದವರನ್ನು ತುಳಿಯಲು ಈಗಲೂ ಪ್ರಯತ್ನಗಳು ನಡೆಯುತ್ತಿವೆ. ನಾನು ಸಿಎಂ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.