ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರ ಜತೆ ಮಾತುಕತೆ ನಡೆಸಿದ್ದು, ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿ ಕೊಡಲಾಗಿದೆ. ಆ ಬೆನ್ನಲ್ಲೇ ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ.
ಸೋಮವಾರದಿಂದಲೇ ತಂಬಾಕು ಖರೀದಿ, ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ಬೆಳೆಗಾರ ಬೇಡಿಕೆಗಳಿಗೆ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಶಮನಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಚಿವ ಗೋಯಲ್ ಅವರು ತಮ್ಮ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಉದ್ಯಮದ ಪ್ರಮುಖರ ಜತೆ ಮಾತನಾಡಿ ಬೆಳೆಗಾರರ ನೆರವಿಗೆ ಬರುವಂತೆ ಸೂಚಿಸಿರೋದಾಗಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಸಚಿವರಾದ ಸಾ.ರಾ. ಮಹೇಶ್, ಮೈಸೂರು-ಕೊಡಗು ಸಂಸದರಾದ ಯದುವೀರ್ ಚಾಮರಾಜೇಂದ್ರ ಕೃಷ್ಣದತ್ತ ಒಡೆಯರ್, ಶಾಸಕರಾದ ಎ.ಮಂಜು, ಜಿ.ಡಿ. ಹರೀಶ್ ಗೌಡ, ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್, ಜೆಡಿಎಸ್ ಹಿರಿಯ ಮುಖಂಡ ಕೃಷ್ಣನಾಯಕ, ಕೋಲಾರ ಸಂಸದ ಮಲ್ಲೇಶ್ ಬಾಬು ಹಾಗೂ ವಾಣಿಜ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.




