ಬೆಂಗಳೂರು: ರಾಜ್ಯದಲ್ಲಿ ಟೋಯಿಂಗ್ ಆರಂಭಿಸುವುದಾಗಿ ಸರ್ಕಾರ ಈಗಾಗಲೇ ಸುಳಿವು ನೀಡಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಸ್ತೆಗಳನ್ನು ಮಾಡುವುದು ಯಾತಕ್ಕೆ? ಜನರು ಓಡಾಡಲಿ ಎಂದು. ಆದರೆ ರಸ್ತೆಗಳಲ್ಲಿಯೇ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿರುವುದರಿಂದ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸುಗಮ ಸಂಚಾರಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಕಡೆಗಳಲ್ಲಿ ಮುಖ್ಯರಸ್ತೆಗಳಲ್ಲಿಯೇ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಜನರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಇದನ್ನು ತಪ್ಪಿಸಲು ಟೋಯಿಂಗ್ ಕ್ರಮ ಮತ್ತೆ ಜಾರಿಯಾಗುತ್ತಿದೆ ಎಂದು ಹೇಳಿದರು.





