ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬಸ್‌ಗಳಿಲ್ಲದೇ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಶಾಲಾ-ಮಕ್ಕಳು ಶಾಲೆಗೆ ಹೋಗದೆ ಮನೆಯಲ್ಲೇ ಉಳಿದಿದ್ದಾರೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೇ ಸಾರಿಗೆ ನೌಕರರನ್ನು ಕರೆಸಿ ಮಾತನಾಡಲಿ. ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸಿದರು.
ಇನ್ನು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಿದ್ದರಾಮಯ್ಯ ನಿದ್ದೆ ಮಾಡುವುದನ್ನು ಬಿಟ್ಟು ಸಾರಿಗೆ ನೌಕರರ ಸಮಸ್ಯೆಗಳನ್ನು ಬಗೆಹರಿಸಲಿ. ನೌಕರರ ಜೊತೆ ಸಿಎಂ ಸಿದ್ದರಾಮಯ್ಯ ಮುಕ್ತವಾಗಿ ಮಾತನಾಡಲಿ. ಪ್ರಯಾಣಿಕರಿಗೆ ತೊಂದರೆ ಆಗದಂತೆ ಕ್ರಮ ವಹಿಸಲಿ ಎಂದು ಆಗ್ರಹಿಸಿದರು.





