ರಾಮನಗರ: ಕನಕಪುರ ತಾಲ್ಲೂಕಿನ ಸಾತನೂರು ಅರಣ್ಯ ವ್ಯಾಪ್ತಿಯ ಹಾರೋಬೆಲೆ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನ್ನಪ್ಪಿವೆ.
ಕುನ್ನೂರಿನಲ್ಲಿ ಅರ್ಕಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಾರೋಬೆಲೆ ಜಲಾಶಯದಲ್ಲಿ ಕಾಡಾನೆಗಳ ಕಳೇಬರ ತೇಲಿಬಂದಿವೆ.
ಕಳೇಬರವನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಹಿನ್ನೀರು ದಾಟುವ ವೇಳೆ ಕಾಲಿಗೆ ಕಳೆ ಸಿಲುಕಿ ಪ್ರಾಣ ಕಳೆದುಕೊಂಡಿವೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆನೆಗಳ ಸಾವಿನ ನಿಖರ ಕಾರಣ ಪತ್ತೆ ಮಾಡಲು ಪಶು ವೈದ್ಯಕೀಯ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಮೃತಪಟ್ಟ ಆನೆಗಳ ವಯಸ್ಸು ಹಾಗೂ ಲಿಂಗ ಪತ್ತೆ ಕಾರ್ಯ ನಡೆಯುತ್ತಿದ್ದು, ಹಾರೋಬೆಲೆ ಜಲಾಶಯದ ಹಿನ್ನೀರಿನಲ್ಲಿ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.





