ಬೆಂಗಳೂರು : ಇಂದಿನ ವಿದ್ಯಾರ್ಥಿಗಳಿಗೆ ಮೌಲ್ಯವೃಧಿತ ಶಿಕ್ಷಣ ಅವಶ್ಯಕವಿದೆ. ಸ್ವಯಂ ಪ್ರಯತ್ನದಿಂದ ಹೊಸ ವಿಚಾರಗಳ ಕುರಿತು ತಿಳಿದುಕೊಳ್ಳುವುದು ತುಂಬಾ ಮುಖ್ಯ ಎಂದು ಹೈಕೋರ್ಟ್‌ನ ನ್ಯಾಯಾಧೀಶರಾದ ಕೆ.ರಾಜೇಶ್ ರೈ ಅವರು ತಿಳಿಸಿದರು.
ನಗರದ ನಾಗಭಾವಿಯಲ್ಲಿರುವ ಶ್ರೀ ಲಕ್ಷ್ಮಿ ಕಾನೂನು ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಆಗುತ್ತಿರುವ ಮಹಿಳ ದೌರ್ಜನ್ಯ, ಲೈಂಗಿಕ ಕಿರುಕುಳ ಹಲ್ಲೆ ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ. ಸದ್ಯ ಮಹಿಳಾ ನ್ಯಾಯಾಧೀಶರ ಅಗತ್ಯವಿದ್ದು, ಅವರ ಪಾತ್ರ ತುಂಬಾ ಮಹತ್ವ ಪಡೆದಿದೆ. ಪಠ್ಯದ ಜೊತೆಗೆ ಪ್ರಾಯೋಗಿಕ ಅಧ್ಯಯನಕ್ಕೆ ಒತ್ತು ನೀಡಬೇಕೆಂದು ವಿದ್ಯಾರ್ಥಿಗಳಿಗೆ ಅವರು ಕರೆ ನೀಡಿದರು.
ಕಾನೂನು ವಿದ್ಯಾರ್ಥಿಗಳು ಯಾವುದೇ ಹಿಂಜರಿಕೆ ಇಲ್ಲದೆ ಕಲಿಕೆಗೆ ಒತ್ತು ನೀಡಿ. ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುವ ಸಲುವಾಗಿ ಬೆಂಗಳೂರು ಭಾಗದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ವೇಳೆ ಹೈಕೋರ್ಟ್‌ಗೆ ಭೇಟಿ ನೀಡಲು ಸೂಚಿಸಿದ್ದೇನೆ. ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಎಲ್ಲಾ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
ಶ್ರೀ ಲಕ್ಷ್ಮಿ ಕಾನೂನು ಮಹಾವಿದ್ಯಾಲಯದ ನಿರ್ದೇಶಕ ಡಾ.ದರ್ಶನ ಎಲ್. ಗೌಡ ಅವರು ಮಾತನಾಡಿ, ಕಾನೂನು ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಎಲ್ಲಾ ಮೌಲ್ಯಗಳನ್ನು ನಮ್ಮ ಕಾಲೇಜಿನಲ್ಲಿ ಬೋಧಿಸಲಾಗುತ್ತದೆ. ಕಾನೂನಿನ ಬಗ್ಗೆ ಆಳವಾಗಿ ಅಧ್ಯಯನ ಮಾಡುವ ಮೂಲಕ ಶೀಘ್ರತಗತಿಯಲ್ಲಿ ನ್ಯಾಯ ಒದಗಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಅವರು, ಗ್ರಾಮೀಣ ಹಿನ್ನಲೆಯಿಂದ ಬಂದ ಸಾಧಕರು ಹಾಗೂ ಕಾನೂನು ಕಾಲೇಜುಗಳ ಅಗತ್ಯ ಮತ್ತು ಸಿವಿಲ್ ನ್ಯಾಯಾಧೀಶರಾಗುವ ಪ್ರಕ್ರಿಯೆ ಕುರಿತು ಉಪನ್ಯಾಸ ನೀಡಿದರು.
ಎಸ್‌ಎಲ್‌ಜಿಐ ಸಿಇಒ ಶಿವಬಸವಯ್ಯ, ಶ್ರೀ ಲಕ್ಷ್ಮಿ ಕಾನೂನು ಮಹಾವಿದ್ಯಾಲಯದ ನಿರ್ದೇಶಕ ಡಾ.ದರ್ಶನ ಎಲ್. ಗೌಡ, ಆಡಳಿತ ನಿರ್ದೇಶಕ ಪ್ರೊ.ಕೆ.ನಾಗಿರೆಡ್ಡಿ, ಕಾಲೇಜಿನ ಪ್ರಾಚಾರ್ಯರಾದ ಡಾ.ಕಾವ್ಯಾ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.





