ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣ ಈಗ ಮತ್ತೆ ಚುರುಕು ಪಡೆದುಕೊಂಡಿದ್ದು, ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆಯಿಂದ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಆಗಸ್ಟ್.7ರವರೆಗೆ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದಲೂ ಭಾರೀ ಮಳೆಯಾಗುತ್ತಿದ್ದು, ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಹಠಾತ್ ಮಳೆಯಿಂದಾಗಿ ನಗರದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮೋಡ ಕವಿದ ವಾತಾವರಣವಿರಲಿದ್ದು, ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.




