ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ತಂಡವನ್ನು ಬರಮಾಡಿಕೊಂಡಿದ್ದಕ್ಕೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿರುವುದು ಬೆಳಕಿಗೆ ಬಂದಿದೆ.
ಸಚಿವ ಸಂಪುಟ ಸಭೆಯ ಬಳಿಕ ಕಾಲ್ತುಳಿತ ಪ್ರಕರಣ ಕುರಿತು ಚರ್ಚಿಸುವ ಸಲುವಾಗಿ ನಡೆದ ವಿಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪರಸ್ಪರ ಕಾವೇರಿದ ಮಾತುಕತೆಗಳು ನಡೆದಿವೆ ಎನ್ನಲಾಗಿದೆ.
ಘಟನೆಯಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಇದಕ್ಕಾಗಿ ಪೊಲೀಸ್ ಆಯುಕ್ತರೂ ಸೇರಿದಂತೆ ಹಿರಿಯ ಅಧಿಕಾರಿಗಳ ತಲೆದಂಡವಾಗಬೇಕು ಎಂದು ಶಿವಕುಮಾರ್ ಪಟ್ಟು ಹಿಡಿದಿದ್ದರು ಎನ್ನಲಾಗಿದೆ.
ಈ ವೇಳೆ ಸಿಟ್ಟಾದ ಮುಖ್ಯಮಂತ್ರಿಯವರು ಅಧಿಕಾರಿಗಳನ್ನು ಹೊಣೆ ಮಾಡುವುದು ಸುಲಭ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನೀವು ಭೇಟಿ ನೀಡಿದ್ದೇಕೆ? ಯಾವುದೇ ಮುನ್ಸೂಚನೆ ಇಲ್ಲದೆ ಪೂರ್ವ ನಿರ್ಧರಿತ ವೇಳಾಪಟ್ಟಿಯೂ ಇಲ್ಲದೆ ಸಾಂವಿಧಾನಿಕ ಹುದ್ದೆಯಲ್ಲಿರುವ ತಾವು ಏಕಾಏಕಿ ಆ ರೀತಿ ಜನಸಂದಣಿಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದೇಕೆ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ನೀವು ಅಲ್ಲಿಗೆ ಹೋಗಿ ಶೋ ಮಾಡಿದ್ದರಿಂದಾಗಿಯೇ ವಿರೋಧಪಕ್ಷಗಳು ಸರ್ಕಾರವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿವೆ. ವಿಧಾನಸೌಧದ ಮುಂದೆ ಯಾವುದೇ ಸಮಸ್ಯೆಗಳೂ ಆಗಿಲ್ಲ. ಗೊಂದಲಗಳೂ ಉಂಟಾಗಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಿದ್ದಾಗಲೂ ನೀವು ಅಲ್ಲಿಗೆ ಭೇಟಿ ನೀಡಿದ್ದರಿಂದ ಅದು ಸರ್ಕಾರದ ಕಾರ್ಯಕ್ರಮ ಎಂಬ ರೀತಿ ಬಿಂಬಿಸಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಚಿವರ ತಲೆದಂಡವಾಗಬೇಕು ಎಂದ ವಿರೋಧಪಕ್ಷಗಳು ಕೇಳುತ್ತಿವೆ. ಇದಕ್ಕೆ ನಾವು ಯಾವ ರೀತಿ ಉತ್ತರಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಗರಂ ಆಗಿದ್ದರು ಎನ್ನಲಾಗಿದೆ.





