Mysore
30
broken clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಶಿವಮೊಗ್ಗ| ತಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಸಚಿವ ಈಶ್ವರ್‌ ಖಂಡ್ರೆ ಸಂತಾಪ

ಬೆಂಗಳೂರು: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಇದೊಂದು ದುರದೃಷ್ಟಕರ ಘಟನೆ ಎಂದು ಶೋಕ ವ್ಯಕ್ತಪಡಿಸಿರುವ ಅವರು, ಈ ದುಃಖದ ಸಂದರ್ಭದಲ್ಲಿ ಮೃತ ವೈದ್ಯರ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ಪ್ರತಿಯೊಂದು ಜೀವವೂ ಅಮೂಲ್ಯ. ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಮೃತ ಯುವ ವೈದ್ಯೆಯ ಕುಟುಂಬದವರಿಗೆ ನಿಯಮಾನುಸಾರ ಕೂಡಲೇ ಪರಿಹಾರ ನೀಡುವಂತೆ ಸೂಚಿಸಿರುವ ಅವರು, ರಾಜ್ಯದ ಎಲ್ಲ ಮೃಗಾಲಯಗಳಲ್ಲಿರುವ ಪಶುವೈದ್ಯರು ಯಾವುದೇ ವನ್ಯಜೀವಿಗೆ ಚಿಕಿತ್ಸೆ ನೀಡುವಾಗ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ಪಾಲಿಸಬೇಕು ಎಂದೂ ಸ್ಪಷ್ಟ ಸೂಚನೆ ನೀಡಿದ್ದಾರೆ.

ಈ ದುರಂತದ ಬಗ್ಗೆ ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡದಿಂದ ತನಿಖೆ ಮಾಡಿಸಿ, 7 ದಿನಗಳ ಒಳಗಾಗಿ ವರದಿ ನೀಡುವಂತೆಯೂ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ಡಾ ಸಮೀಕ್ಷಾ ರೆಡ್ಡಿ ಅವರು ಗುರುವಾರ 11.30ರ ಸಮಯದಲ್ಲಿ ವನ್ಯಜೀವಿಯೊಂದಕ್ಕೆ ಚಿಕಿತ್ಸೆ ನೀಡಲು ತೆರಳಿದ್ದಾಗ, ನೀರಾನೆ ದಾಳಿಯಿಂದ ಗಾಯಗೊಂಡಿದ್ದರು. ಅವರನ್ನು ಕೂಡಲೇ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ 6.30ರ ಸುಮಾರಿನಲ್ಲಿ ಅವರು ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ.

 

 

Tags:
error: Content is protected !!