ರಾಜ್ಯ

ಕೆಪಿಎಸ್‌ಸಿ ಮರುಪರೀಕ್ಷೆ ಎಡವಟ್ಟಿನ ಬಗ್ಗೆ ವಿಜಯೇಂದ್ರ ಹಾಗೂ ಅಶೋಕ್‌ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕೆಪಿಎಸ್‌ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೆಪಿಎಸ್‌ಸಿ ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳ ಮೂಲಕ ಕೆಪಿಎಸ್‌ಸಿ ನ್ಯೂನತೆಗಳು ಬಯಲಾಗುತ್ತಲೇ ಇವೆ. ಡಿಸೆಂಬರ್ 29 ರಂದು ನಡೆದ ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ ಮಾಡಿದ್ದ ಕೆಪಿಎಸ್‌ಸಿ ಕನ್ನಡ ಭಾಷೆಯಲ್ಲಿರುವ ಯಾವುದೇ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಗೊಂದಲವಾದಲ್ಲಿ ಆಂಗ್ಲ ಭಾಷೆಯ ಪ್ರಶ್ನೆಗಳನ್ನು ನೋಡಿ ಅರ್ಥ ಮಾಡಿಕೊಳ್ಳಿ ಎಂದು ಅಭ್ಯರ್ಥಿಗಳಿಗೆ ಸೂಚಿಸುವ ಮೂಲಕ ತಮ್ಮ ಎಡವಟ್ಟುಗಳನ್ನು ಮಾಡಿಯೇ ಸಿದ್ಧ ಎಂಬ ಮುನ್ಸೂಚನೆ ನೀಡಿತ್ತು. ಆದರೆ ಇದೀಗ ಮತ್ತೆ ಭಾಷಾಂತರ ಲೋಪ ಹಾಗೂ ಕೆಲ ಜಿಲ್ಲೆಗಳಲ್ಲಿ ಒಎಂಆರ್ ಶೀಟ್ ಸಂಖ್ಯೆಗಳೇ ಅದಲು-ಬದಲಾಗಿರುವುದು ಪರೀಕ್ಷಾರ್ಥಿಗಳನ್ನು ಮತ್ತಷ್ಟು ಆತಂಕಕ್ಕೆ ತಳ್ಳಲ್ಪಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದಿನ ಪರೀಕ್ಷೆಯಲ್ಲೂ ಕನ್ನಡ ಭಾಷಾ ಪರೀಕ್ಷಾರ್ಥಿಗಳಿಗೆ ಸಮರ್ಪಕವಾಗಿ ಭಾಷಾಂತರಿಸದೇ ಎಡವಟ್ಟು ಮಾಡಿ ಲಕ್ಷಾಂತರ ಪರೀಕ್ಷಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕರ್ನಾಟಕದ ಮಾತೃಭಾಷೆಯಲ್ಲಿಯೇ ಸೂಕ್ತ ಪ್ರಶ್ನೆಗಳನ್ನು ನೀಡುವಲ್ಲಿ ಸಂಪೂರ್ಣ ವಿಫಲವಾಗಿ ಪದೇ ಪದೇ ಕೆಎಎಸ್ ಪರೀಕ್ಷಾರ್ಥಿಗಳನ್ನು ಗೊಂದಲಕ್ಕೆ ದೂಡುತ್ತಿರುವ ಬೇಜವಾಬ್ದಾರಿತನ ಪದೇ ಪದೇ ಮರುಕಳಿಸುತ್ತಿರುವುದು ಕೆಪಿಎಸ್‌ಸಿ ವೈಫಲ್ಯ ಹಾಗೂ ರಾಜ್ಯ ಸರ್ಕಾರದ ಅಸಮರ್ಥ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಠಿಣ ಪರಿಶ್ರಮದಿಂದ ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಸಾವಿರಾರು ಉದ್ಯೋಗಾಕಾಂಕ್ಷಿಗಳ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅಲ್ಲದೇ ಕೆಪಿಎಸ್‌ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮರುಪರೀಕ್ಷೆಯಲ್ಲೂ ಮುಗ್ಗರಿಸಿದ ಎಡವಟ್ಟು ಕಾಂಗ್ರೆಸ್ ಸರ್ಕಾರ: ಆರ್‌.ಅಶೋಕ್‌

ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಸಹ ಸರ್ಕಾರದ ವಿರುದ್ಧ ತಮ್ಮ ಎಕ್ಸ್‌ ಖಾತೆಯಲ್ಲಿ ಕಿಡಿಕಾರಿದ್ದು, ಈ ಮೊದಲು ಆಗಸ್ಟ್‌ನಲ್ಲಿ ನಡೆದ 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ಕಂಡು ಬಂದ ನಂತರ ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದು ನಿನ್ನೆ ನಡೆಸಲಾದ ಮರುಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಎಡವಟ್ಟುಗಳ ಮೇಲೆ ಎಡವಟ್ಟುಗಳು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಭಾಷಾಂತರದಲ್ಲಿ ಲೋಪ ದೋಷ, OMR ಶೀಟ್ ಮತ್ತು ನೋಂದಣಿ ಸಂಖ್ಯೆ ಅದಲು ಬದಲು, ಕೆಲವೆಡೆಗಳಲ್ಲಿ 45 ನಿಮಿಷ ತಡವಾಗಿ ಪರೀಕ್ಷೆ ಆರಂಭ ಹೀಗೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿದ್ದ ಭಾನುವಾರದ ಮರುಪರೀಕ್ಷೆ ಮತ್ತೊಮ್ಮೆ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮರುಪರೀಕ್ಷೆಗೆ ನೋಂದಣಿ ಮಾಡಿಕೊಂಡ್ಡ 2.109 ಲಕ್ಷ ಅಭ್ಯರ್ಥಿಗಳ ಪೈಕಿ ಕೇವಲ 1.005 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದು, ಆಗಸ್ಟ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಶೇ.62.52% ರಷ್ಟಿದ್ದ ಹಾಜರಾತಿ, ಮರುಪರೇಕ್ಷೆಯಲ್ಲಿ ಶೇ.47.7%ಕ್ಕೆ ಕುಸಿದಿರುವುದು ಅಭ್ಯರ್ಥಿಗಳು @INCKarnataka ಸರ್ಕಾರದ ಮೇಲೆ, ಕೆಪಿಎಸ್ ಸಿ ಮೇಲೆ ನಂಬಿಕೆ ಕಳೆದುಕೊಂಡಿರುವುದಕ್ಕೆ ಸಾಕ್ಷಿಯಾಗಿದೆ.

ಸಿಎಂ ಸಿದ್ದರಾಮಯ್ಯ ಅವರೇ, ತಮ್ಮ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ, ಸ್ವಜನಪಕ್ಷಪಾತವೆ ಕೆಪಿಎಸ್‌ಸಿ ಪರೀಕ್ಷೆಗಳಲ್ಲಿನ ಪದೇ ಪದೇ ಎಡವಟ್ಟಿಗೆ ಕಾರಣ. ಇನ್ನು ಆಗಸ್ಟ್‌ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಗೆ 13.40 ಕೋಟಿ ರೂಪಾಯಿ ವೆಚ್ಚವಾಗಿತ್ತು. ಮರುಪರೀಕ್ಷೆಗೂ ಅಷ್ಟೇ ಮೊತ್ತ ಅಥವಾ ಅದಕ್ಕಿಂತ ಹೆಚ್ಚು ಖರ್ಚಾಗಿರುತ್ತದೆ. ಅದರಲ್ಲಿ ಸುಮಾರು 5.3 ಕೋಟಿ ರೂಪಾಯಿ ಪರೀಕ್ಷಾ ಗೋಪ್ಯತೆ ಕಾಪಾಡುವುದಕ್ಕೆ ವೆಚ್ಚ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇಷ್ಟಾದರೂ ಈ ಪರಿ ಎಡವಟ್ಟುಗಳು ಮರುಕಳಿಸಿದೆ ಎಂದರೆ ಇದಕ್ಕೆ ಯಾರು ಹೊಣೆ? ಸಾರ್ವಜನಿಕರ ತೆರಿಗೆ ಹಣವನ್ನು ಹೀಗೆ ಪೋಲು ಮಾಡುವುದು ಯಾವ ನ್ಯಾಯ? ಒಂದಲ್ಲ, ಹತ್ತು ಬಾರಿ ಮರುಪರೀಕ್ಷೆ ನಡೆಸಿದರೂ ಈ ಎಡವಟ್ಟು ಕಾಂಗ್ರೆಸ್ ಸರ್ಕಾರಕ್ಕೆ ಸರಿಯಾಗಿ ಪರೀಕ್ಷೆ ನಡೆಸಲು ಯೋಗ್ಯತೆ ಇಲ್ಲ ಎನ್ನುವ ಅಭಿಪ್ರಾಯ ಅಭ್ಯರ್ಥಿಗಳಲ್ಲಿ ಈಗಾಗಲೇ ಮೂಡಿದೆ. ಆದ್ದರಿಂದಲೇ ಹಾಜರಾತಿ ಗಣನೀಯವಾಗಿ ಕುಸಿದಿದೆ ಎಂದು ಹೇಳಿದ್ದಾರೆ.

ಆಗಸ್ಟ್‌ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಯ ಎಡವಟ್ಟುಗಳಿಗೆ, ಲೋಪ ದೋಷಗಳಿಗೆ ಕಾರಣರಾದ ಪರೀಕ್ಷಾ ನಿಯಂತ್ರಕರ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಅದೇ ಹುದ್ದೆಯಲ್ಲಿ ಮುಂದುವರೆಸಿದ್ದೀರಿ. ಕಾರ್ಯದರ್ಶಿಗಳನ್ನು ಮಾತ್ರ ಎತ್ತಂಗಡಿ ಮಾಡಿದ್ದೀರಿ. ತಮ್ಮ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಸ್ವಜನಪಕ್ಷಪಾತ, ಭ್ರಷ್ಟಾಚಾರವೇ ಪದೇ ಪದೇ ಈ ಎಡವಟ್ಟುಗಳು ಮರುಕಳಿಸುತ್ತಿರುವುದಕ್ಕೆ ಮೂಲ ಕಾರಣ ಎಂದು ಕಿಡಿಕಾರಿದ್ದಾರೆ.

ಕೆಪಿಎಸ್‌ಸಿ ಸಂಸ್ಥೆ ಈ ರೀತಿ ನಂಬಿಕೆ ಕಳೆದುಕೊಂಡು, ಹೆಸರು ಕೆಡಸಿಕೊಂಡರೆ ಉತ್ತಮ ಅಭ್ಯರ್ಥಿಗಳನ್ನು,
ಪ್ರತಿಭಾವಂತ ಯುವಕರನ್ನ ಸರ್ಕಾರಿ ಸೇವೆಯತ್ತ ಆಕರ್ಷಿಸುವುದು ಹೇಗೆ ಸಾಧ್ಯ? ಆಡಳಿತಕ್ಕೆ ಹೊಸ ರಕ್ತ ಬರದಿದ್ದರೆ ಆಡಳಿತವನ್ನು ಚುರುಕುಗೊಳಿಸುವುದು ಹೇಗೆ? ಯುವ ಜನಾಂಗ ಸಾರ್ವಜನಿಕ ಸೇವೆಗೆ ಬರದಿದ್ದರೆ ಆಡಳಿತಕ್ಕೆ ಹೊಸ ಚೈತನ್ಯ ತುಂಬಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, 16 ಸದಸ್ಯರನ್ನು ಒಳಗೊಂಡ ಕೆಪಿಎಸ್‌ಸಿ ಸಂಸ್ಥೆಯೂ ದೇಶದಲ್ಲೇ ದೊಡ್ಡ ಆಯೋಗವಾಗಿದೆ. ಅವರ ಸಂಬಳ ಸಾರಿಗೆಗೆಂದು ಸರ್ಕಾರ ಕೋಟ್ಯಂತರ ರೂಪಾಯಿ ತೆರಿಗೆ ಹಣ ವ್ಯಯ ಮಾಡುತ್ತದೆ. ಇಷ್ಟಾದರೂ ಒಂದು ಗೊಂದಲಮುಕ್ತ ಪೂರ್ವಭಾವಿ ಪರೀಕ್ಷೆ ನಡೆಸಲು ವಿಫವಾಗುತ್ತದೆ ಎಂದರೆ ಇದನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲೆಬೇಕು. ಲಕ್ಷಾಂತರ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಾಕಷ್ಟು ಹಣ, ಸಮಯ ಸಮರ್ಪಿಸುತ್ತಾರೆ. ಅನೇಕರು ತಮ್ಮ ಭವಿಷ್ಯವನ್ನೇ ಪಣಕ್ಕಿಟ್ಟು ತಯಾರಿ ನಡೆಸುತ್ತಾರೆ. ಅನೇಕ ಬಡ ಅಭ್ಯರ್ಥಿಗಳು ಸಾಲ-ಸೋಲ ಮಾಡಿ ಕೋಚಿಂಗ್ ಪಡೆಯುತ್ತಾರೆ. ಇಷ್ಟೆಲ್ಲಾ ತನು-ಮನ-ಧನ ಧಾರೆ ಎರೆದು ಪರೀಕ್ಷೆಗೆ ಕುಳಿತುಕೊಳ್ಳುವ ಅಭ್ಯರ್ಥಿಗಳಿಗೆ ಪದೇ ಪದೇ ಈ ರೀತಿ ಗೊಂದಲವಾಗುತ್ತಿದ್ದರೆ ಸರ್ಕಾರ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗಿತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಭ್ಯರ್ಥಿಗಳ ಹಿತದೃಷ್ಟಿಯಿಂದ, ಆಡಳಿತದ ಹಿತದೃಷ್ಟಿಯಿಂದ ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿ, ಕೆಪಿಎಸ್‌ಸಿಯಲ್ಲಿ ಆಮೂಲಗ್ರ ಬದಲಾವಣೆ ತರುವ ಮೂಲಕ ಇಡೀ ನೇಮಕಾತಿ ವ್ಯವಸ್ಥೆಗೆ ಹೊಸ ಕಾಯಕಲ್ಪ ನೀಡಲಿ ಎಂದು ಅಭ್ಯರ್ಥಿಗಳ ಪರವಾಗಿ ಅಗ್ರಹಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು ಮೃಗಾಲಯದಲ್ಲಿ 9 ಮಂದಿ ಮಾತ್ರ ಖಾಯಂ ನೌಕರರಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…

23 mins ago

ವಿಪಕ್ಷಗಳ ವಿರೋಧದ ಮಧ್ಯೆ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…

37 mins ago

ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…

41 mins ago

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…

50 mins ago

ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್‌ ಮತ್ತು ಅಜೀವಿಕಾ…

1 hour ago

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…

2 hours ago