ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರು ಸರಣಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ವಿರುದ್ಧ ಬಿಜೆಪಿಯೂ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಹಾಕಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಬಾಣಂತಿಯರ ಸರಣಿ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ” ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು ಬಿದಿಗಿಳಿದು ಪ್ರತಿಭಟನೆ ನಡೆಸಿದರೂ ಎಚ್ಚೆತ್ತುಕೊಂಡು ಘಟನೆಯ ಕುರಿತು ಕಠಿಣ ಕ್ರಮ ಕೈಗೊಳ್ಳಲು ತಾತ್ಸಾರ ಧೋರಣೆ ತಾಳಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು, ಬಡವರ ಶಾಪ ತಟ್ಟಲಿದೆ ಎಂದು ಎಚ್ಚರಿಸಿದ್ದಾರೆ.





