ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್ ಗೌಡ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ತನಿಖೆ ನಡೆಯುವಾಗ ಹೆಚ್ಚಿಗೆ ಮಾತನಾಡುವುದು ಸರಿಯಲ್ಲ. ಬಿಜೆಪಿ ನಾಯಕರ ಬೇಡಿಕೆಯನ್ನು ಒಪ್ಪಲು ಆಗಲ್ಲ. ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ. ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡಿಕೊಂಡು ಬಂದಿದೆ ಎಂದು ಕಿಡಿಕಾರಿದರು.





