ಬೆಂಗಳೂರು : ರಾಮನಗರದ ಮೇಕೆದಾಟು ಬಳಿಯಿಂದ ಬೆಂಗಳೂರಿನವರೆಗೆ ಆಯೋಜಿಸಿದ್ದ ನಮ್ಮ ನೀರು, ನಮ್ಮ ಹಕ್ಕು ಪಾದಯಾತ್ರೆ ವೇಳೆ, ಕೋವಿಡ್ ಮಾರ್ಗಸೂಚಿಗಳು ಹಾಗೂ ಸೆಕ್ಷನ್ 144 ಉಲ್ಲಂಘನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿದ್ದ 9 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ತೀರ್ಮಾನಿಸಿದೆ.
ಅಂದು 2022ರಲ್ಲಿ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಕೋವಿಡ್ ನಿರ್ಬಂಧಗಳ ಹೊರತಾಗಿಯೂ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅನುಷ್ಠಾನಕ್ಕೆ ಒತ್ತಾಯಿಸಿ ಪಾದಯಾತ್ರೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 9 ಕ್ರಿಮಿನಲ್ ಪ್ರಕರಣಗಳು ದಾಖಲಾಗಿತ್ತು. ಇದೀಗ ಆ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ನಿನ್ನೆಯ ಸಚಿವ ಸಂಪುಟದದಲ್ಲಿ ನಿರ್ಧರಿಸಲಾಗಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳು ಹಾಗೂ ಸೆಕ್ಷನ್ 144 ಉಲ್ಲಂಘನೆಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 9 ಕ್ರಿಮಿನಲ್ ಪ್ರಕರಣಗಳನ್ನು ಅಭಿಯೋಜನೆಯಿಂದ ಕೈ ಬಿಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.