ಕೇರಳ: ಕೇರಳದ ವಯನಾಡಿನಲ್ಲಿ ನಡೆದ ಭಾರೀ ಭೂಕುಸಿತ ದುರಂತದಲ್ಲಿ ಇದುವರೆಗೆ 93 ಮಂದಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದು, ಇದೇ ಅಂತಿಮ ಅಂಕಿ-ಅಂಶವಲ್ಲ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ವಯನಾಡಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ್ದು, ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. 34 ಮೃತದೇಹಗಳ ಗುರುತು ಪತ್ತೆಯಾಗಿದೆ. ದುರಂತದಲ್ಲಿ 120ಕ್ಕೂ ಹೆಚ್ಚು ಮಂದಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 93 ಮಂದಿ ಸಾವನ್ನಪ್ಪಿದ್ದಾರೆ. ಗುರುತು ಪತ್ತೆಹಚ್ಚಲು ಸಾಧ್ಯವಾಗದ ಮೃತದೇಹಗಳೂ ಕೂಡ ಇವೆ ಎಂದು ಮಾಹಿತಿ ನೀಡಿದ್ದಾರೆ.
ರಕ್ಷಣಾ ಕಾರ್ಯಾಚರಣೆಗೆ ಎರಡು ಹೆಲಿಕಾಪ್ಟರ್ ಸಿದ್ಧವಿದ್ದು, ಪ್ರತಿಕೂಲ ಹವಾಮಾನದಿಂದ ಹಾರಾಟ ಸಾಧ್ಯವಾಗಿಲ್ಲ. ಬೆಂಗಳೂರಿನಿಂದ ಬಂದ ತಂಡಕ್ಕೆ ಟ್ರಾಫಿಕ್ ಫ್ರೀ ವ್ಯವಸ್ಥೆ ಮಾಡಿದ್ದೆವು. ಸಂತ್ರಸ್ತರಿಗಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ತಾತ್ಕಾಲಿಕ ಕ್ಲಿನಿಕ್ ವ್ಯವಸ್ಥೆ ಮಾಡಲಾಗಿದ್ದು, ವೈದ್ಯಕೀಯ ತಂಡ ನಿಯೋಜಿಸಲಾಗಿದೆ ಎಂದು ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.