ಬೆಂಗಳೂರು: ರಾಜ್ಯದಲ್ಲಿ ಜೂನ್. 26ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ಎಲ್ಲೆಡೆ ಒಣಹವೆ ಇತ್ತು. ಆದರೆ ಇಂದಿನಿಂದ ಮಳೆ ಚುರುಕು ಪಡೆದುಕೊಂಡಿದ್ದು, ಜೂನ್.26ರ ನಂತರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರ್ಗಿ, ವಿಜಯಪುರ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.
ಇನ್ನು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಮಕ್ಕಳನ್ನು ಸುರಕ್ಷಿತವಾಗಿ ಮನೆಯಲ್ಲಿ ಇರಿಸಿಕೊಳ್ಳುವಂತೆ ಶಾಲಾ ಆಡಳಿತ ಮಂಡಳಿ ಸೂಚನೆ ನೀಡಿವೆ.





