ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ಅಲ್ಲದೇ ನಮ್ಮ ರಾಜ್ಯದವರಾಗಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ನಿನ್ನೆ(ಅ.5) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಹಲವು ವಿವಾದಗಳು ಸೃಷ್ಠಿಯಾಗಿದ್ದವು. ಆದರೆ ಇದೀಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿದ್ದಾರೆ. ನಮ್ಮ ಪಕ್ಷದ ನಾಯಕರು ಅವರನ್ನು ಭೇಟಿ ಮಾಡದೇ ಮತ್ತೆ ಯಾರನ್ನು ಭೇಟಿ ಮಾಡಬೇಕು. ಈ ವಿಷಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಎಂ ಬದಲಾವಣೆ ಚರ್ಚೆಯಾಗಿಲ್ಲ
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ವೇಣುಗೋಪಾಲ್ ಅವರು ರಾಜ್ಯಕ್ಕೆ ಬರುವ ವಿಚಾರ ನನಗೆ ತಿಳಿದಿಯೂ ಇಲ್ಲ. ಹಾಗೆಯೇ ಯಾವುದೇ ರೀತಿಯ ಮಾಹಿತಿಯೂ ಬಂದಿಲ್ಲ. ನಾನು ದೆಹಲಿಗೆ ಹೋಗುವ ಅನಿವಾರ್ಯತೆ ಇಲ್ಲ ಎಂದು ರಾಜೀನಾಮೆಗೆ ವಿಷಯಕ್ಕೆ ತೆರೆ ಎಳೆದಿದ್ದಾರೆ.





