Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ: ಈಶ್ವರ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕೊಡಗು-ಮೈಸೂರು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಅವರನ್ನು ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ಮಾತನಾಡಿದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದ್ದಾರೆ.

ಪ್ರಕೃತಿ, ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯಲ್ಲಿ ಕೋಟ್ಯಾಂತರ ರೂಪಾಯಿಯ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧವಾಗಿದ್ದು, ಅಂತವರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ.

ಈ ರೀತಿ ಅರಣ್ಯ ಸಂಪತ್ತನ್ನು ನಾಶಪಡಿಸಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು, ವೃಕ್ಷ ಸಂರಕ್ಷಣಾ ಕಾಯಿದೆಯಡಿ ಸರ್ಕಾರಿ ಜಾಗದಲ್ಲೇ ಆಗಲಿ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೇ ಅಕ್ರಮವಾಗಿ ಮರ ಕಡಿಯುವುದು ಅಪರಾಧವಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ನಾನು ಯಾರ ಹೆಸರೂ ಹೇಳಲು ಇಚ್ಛಿಸುವುದಿಲ್ಲ.

ಆದರೆ, ವಿಕ್ರಂ ಸಿಂಹ ಎಂಬುವವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ತಹಶೀಲ್ದಾರ್ ಅವರು ಪ್ರಕರಣ ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ಕ್ಷಿಪ್ರವಾಗಿ ಕ್ರಮ ವಹಿಸದ ಮತ್ತು ನಿಯಮಾನುಸಾರ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಎಸಗಿರುವ ಆರೋಪದಡಿ 5 ಅಧಿಕಾರಿ, ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಸಚಿವ ಈಶ್ವರ್​ ಖಂಡ್ರೆ ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ