ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ಕೇವಲ 2340 ಕೋಟಿ ನೀಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯಕ್ಕೆ ಕೊಡಿಸಲಿ ಎಂದು ವಾಗ್ದಾಳಿ ನಡೆಸಿದರು.
ಏನನ್ನೂ ತಿಳಿಯದೇ ಎಲ್ಲರೂ ಸುಖಾಸುಮ್ಮನೆ ಮಾತನಾಡಿದರೆ ಏನೂ ಪ್ರಯೋಜವಿಲ್ಲ. ಎಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದಾರೆಯೇ ಎಂದು ಪ್ರಶ್ನಿಸಿದರು.





