ತೀರ್ಥಹಳ್ಳಿ: ಪಟ್ಟಣದ ಹಿಂದುಳಿದ ವರ್ಗಗಳ ವಸತಿ ನಿಲಯವೊಂದರಲ್ಲಿ ಮಂಗಳವಾರ ಸಂಜೆ ವಿಷ ಸೇವಿಸಿ ಮೂವರು ಪಿಯುಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾವು ಇಲಿ ಪಾಷಾಣ ಸೇವಿಸಿರುವುದಾಗಿ ವೈದ್ಯರ ಬಳಿ ಈ ವಿದ್ಯಾರ್ಥಿನಿಯರು ಹೇಳಿಕೊಂಡಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಂಗಳವಾರ ಸಂಜೆ 6ರ ಹೊತ್ತಿಗೆ ಹಾಸ್ಟೆಲಿನಲ್ಲಿ ತಿಂಡಿ ತಿಂದ ನಂತರ ವಿದ್ಯಾರ್ಥಿನಿಯರ ವರ್ತನೆಯ ಬಗ್ಗೆ ಅನುಮಾನಗೊಂಡ ಇತರ ವಿದ್ಯಾರ್ಥಿನಿಯರು ಹಾಗೂ ಹಾಸ್ಟೆಲ್ ಸಿಬ್ಬಂದಿ ಕೂಡಲೇ ಅವರನ್ನು ಪಟ್ಟಣದ ಸರ್ಕಾರಿ ಜೆಸಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಮೂವರೂ ಸುರಕ್ಷಿತವಾಗಿದ್ದಾರೆ.
ಪಟ್ಟಣದ ಸರ್ಕಾರಿ ಪಿ.ಯು. ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಈ ವಿದ್ಯಾರ್ಥಿನಿಯರು ಒಂದೇ ತರಗತಿಯವರು. ತರಗತಿ ಶಿಕ್ಷಕಿಯರ ಹೇಳಿಕೆಯಂತೆ ವಿದ್ಯಾರ್ಥಿನಿಯರು ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಈ ಬಗ್ಗೆ ಪೋಷಕರಿಗೆ ತಿಳಿಸುವುದಾಗಿ ತಿಳಿ ಹೇಳಿದ್ದರು ಎನ್ನಲಾಗಿದೆ.