ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್ 21ರಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಿದ್ದಾರೆ. ಇದರಿಂದ ಯುಗಾದಿ ಹಬ್ಬಕ್ಕೆ ಮುನ್ನವೇ ರಾಜ್ಯಾದ್ಯಂತ 23 ಸಾವಿರ ಬಸ್ಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.
ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿಐಟಿಯು), ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಕೆಎಸ್ಆರ್ಟಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೌಕರರ ಸಂಘ, ಕೆಎಸ್ಆರ್ಟಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವನ್ನೊಳಗೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಒಮ್ಮತದ ನಿರ್ಣಯ ಕೈಗೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಆರ್ ಚಂದ್ರಶೇಖರ್ ನೇತೃತ್ವದ ಸಂಘಟನೆಯು ಮಾ. 24ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ.