ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಮುಂದಿನ ತಿಂಗಳ ಡಿಸೆಂಬರ್.2ರ ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ನಡೆಸಿತು.
ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದವನ್ನು ಸೋಮವಾರ ಪೂರ್ಣಗೊಳಿಸುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿ ಪಡಿಸಲಾಗುವುದು. ಅಂದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿತು.
ಇದರ ಜೊತೆಗೆ ಅರ್ಜಿದಾರ ಬಿ.ಎಸ್.ಯಡಿಯೂರಪ್ಪ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಿಯಿಂದ ವಿನಾಯಿತಿ ನೀಡಿರುವ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಯಿತು.